ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ಮಾಹೆಯಲ್ಲಿ ನಿರ್ದೇಶನ ನೀಡಲಾಗಿದೆ ಎಂದು ಗ್ರಾಮೀನಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಐಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ನವೆಂಬರ್ ನಲ್ಲಿ ನೀಡಿದ ಸೂಚನೆಯಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.
ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ಬೇಡಿಕೆ ಕಡಿಮೆ ಇರುವುದರಿಂದ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಕೊರತೆ ಇರುವುದರಿಂದ ಅಂತಹ ಜಿಲ್ಲೆಗಳಲ್ಲಿ ಬಾಕಿ ವೇತನವನ್ನು ಪಾವತಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಗೆ ಸಂಬಂಧಿಸಿದಂತೆ 2025-26 ನೇ ಸಾಲಿನಲ್ಲಿ ಮಾರ್ಚ್ 2025 ರಿಂದ ನವೆಂಬರ್ 2025ರವರೆಗೆ 03 ತ್ರೈಮಾಸಿಕ ಕಂತುಗಳಲ್ಲಿ ಒಟ್ಟು ರೂ.60,49,75,549 ಗಳ ಗೌರವ ಧನವನ್ನು ನೇರವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಲಾಗಿದೆ ಎಂದರು.
