ಬೆಳಗಾವಿ(ಸುವರ್ಣಸೌಧ): ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಬಾಕಿ ಇದ್ದರೆ ತಕ್ಷಣ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಪಕ್ಷಗಳ ಸದಸ್ಯರು ಆರೋಪಿಸಿದ್ದಾರೆ. ಈ ಬಗ್ಗೆಯೂ ಸಚಿವರಿಂದ ಸೋಮವಾರ ಸ್ಪಷ್ಟನೆ ಕೊಡಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ,
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಆಗಸ್ಟ್ ತಿಂಗಳವರೆಗೆ ಹಣ ಪಾವತಿಸಲಾಗಿದೆ. ಒಂದು ವೇಳೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದಾದರೆ ತಕ್ಷಣ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿ ಬಳಿಕ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಡಿಸೆಂಬರ್ 9 ರಂದು ಸದಸ್ಯರು ಸದನದಲ್ಲಿ ಕೇಳಿದ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುಳ್ಳು ಮಾಹಿತಿ ನೀಡಿದ್ದಾರೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ನೀಡಿಲ್ಲ ಎಂದು ಹೇಳುತ್ತಿದ್ದರೂ ವಿಪಕ್ಷ ಸದಸ್ಯರೇ ದಡ್ಡರು ಎನ್ನುವಂತೆ ಮಾತನಾಡಿದ್ದಾರೆ. ಸೆಪ್ಟೆಂಬರ್ ವರೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಸಲಾಗಿದೆ ಎಂದು ಸುಳ್ಳು ಹೇಳಿದ್ದಾರೆ. ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅವರಿಂದ ಸುಳ್ಳು ಹೇಳಿಸಿದ ಅಧಿಕಾರಿ ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ.
ವಿ. ಸುನಿಲ್ ಕುಮಾರ್, ಮಹೇಶ್ ಟೆಂಗಿನಕಾಯಿ ಸೇರಿದಂತೆ ಕೆಲವು ಸದಸ್ಯರು ತಪ್ಪು ಮಾಹಿತಿಯಿಂದ ಸದನದ ಹಕ್ಕುಚ್ಯುತಿಯಾಗಿದೆ. ಸದನದ ದಿಕ್ಕು ತಪ್ಪಿಸಿ ಅವಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಸದ್ಯ ಸದನದಲ್ಲಿ ಉಪಸ್ಥಿತರಿಲ್ಲ. ಆಗಸ್ಟ್ ವರೆಗೆ ಎಲ್ಲಾ ಹಣ ಪಾವತಿಸಲಾಗಿದೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ಹಣವನ್ನು ಕೂಡ ಶೀಘ್ರವೇ ಪಾವತಿಸಲಾಗುವುದು. ಒಂದು ವೇಳೆ ಫೆಬ್ರವರಿ, ಮಾರ್ಚ್ ತಿಂಗಳ ಹಣ ನೀಡಿಲ್ಲ ಎಂದಾದಲ್ಲಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
