ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶಾಸಕರಾದ ಶಾಮನೂರು ಶಿವಶಂಕರಪ್ಪ(94) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಹೆಚ್.ಡಿ.ಕೆ. ಪ್ರಾರ್ಥಿಸಿದ್ದಾರೆ.

