ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶಾಸಕರಾದ ಶಾಮನೂರು ಶಿವಶಂಕರಪ್ಪ(94) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಸಿಎಂ ಸಿದ್ಧರಾಮಯ್ಯ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಅವರ ಸರಳತೆ ಮತ್ತು ಸಾರ್ವಜನಿಕ ಜೀವನದಲ್ಲಿ ಅವರ ಸುಧೀರ್ಘ ಜನಸೇವೆ ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ.
ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯವಾಗಿದೆ. ಶಿಕ್ಷಣ, ಅರೋಗ್ಯ ಮತ್ತು ಸಮಾಜ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕನ್ನು ಬೆಳಗಿದ್ದ, ಶಾಮನೂರು ಶಿವಶಂಕರಪ್ಪನವರ ದಶಕಗಳ ಸುದೀರ್ಘ ಸೇವೆ, ಜನಪರ ಕಾಳಜಿ ಮತ್ತು ಸಾಧನೆಗಳು ಮಾದರಿಯಾಗಿದೆ. ಅವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ, ಅದರಲ್ಲೂ ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ ಮತ್ತು ವೀರಶೈವ ಲಿಂಗಾಯತ ಮಹಾಸಭೆಗೆ ತುಂಬಲಾರದ ನಷ್ಟವಾಗಿದೆ ಅವರೊಂದಿಗಿನ ದಶಕಗಳ ಒಡನಾಟ, ಸಮಾಜದ ಒಗ್ಗಟ್ಟಿಗಾಗಿ ಅವರ ತುಡಿತ, ಅವರ ನಿರಂತರ ಪ್ರಯತ್ನಗಳನ್ನು ಹತ್ತಿರದಿಂದ ಕಂಡಿದ್ದೇನೆ. ವೈಯಕ್ತಿಕವಾಗಿ ಒಬ್ಬ ಆತ್ಮೀಯ ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

