ಶಿವಮೊಗ್ಗ: ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಶಿಕ್ಷಕರ ಪ್ರೋತ್ಸಾಹದ ಜೊತೆಗೆ ಪೋಷಕರ ಸಹಕಾರವೂ ಅತ್ಯಗತ್ಯವಾಗಿದೆ. ಶಾಲೆಗಳಲ್ಲಿ ನೈತಿಕ ಶಿಕ್ಷಣಕ್ಕೆ ಒತ್ತು ಕೊಟ್ಟಿರುವುದರಿಂದ ಮಕ್ಕಳಿಗೆ ಪೋಷಕರ, ಹಿರಿಯರ ಬಗ್ಗೆ ಗೌರವದ ಭಾವನೆಗಳು ಮೂಡಲಿವೆ. ಅಲ್ಲದೇ ಭಾವನಾತ್ಮಕ ಸಂಬಂಧಗಳು ಗಟ್ಟಿಗೊಳ್ಳುತ್ತವೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ.
ಅವರು ಇಂದು ನಗರದ ಡಿ.ವಿ.ಎಸ್. ಮಹಾವಿದ್ಯಾಲಯದ ಸಿಂಗಾರ ಸಭಾಂಗಣದಲ್ಲಿ 2022-23 ಮತ್ತು 2023-24ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗಾಗಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳ ವ್ಯವಸ್ಥಿತ ಅನುಷ್ಠಾನಕ್ಕೆ ಯಾವುದ ಹಣಕಾಸಿನ ಅಡಚಣೆ ಇಲ್ಲ. ದೈಹಿಕ ಶಿಕ್ಷಣ ಮತ್ತು ಸಂಗೀತ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗುವುದು. 1995ರ ನಂತರದ ಖಾಸಗಿ ಶಾಲೆಗಳನ್ನು ಅನುದಾನದ ವ್ಯಾಪ್ತಿಗೊಳಪಡಿಸಲು ಯೋಚಿಸಲಾಗುತ್ತಿದೆ. ಶಿಕ್ಷಕರ ಕೊರತೆಯನ್ನು ನೀಗಿಸುವಲ್ಲಿ 12000ಶಿಕ್ಷಕರ ನೇಮಕಾತಿಗೆ ಕ್ರಮ ಇವೆಲ್ಲವುಗಳು ಪ್ರತಿ ಮಗುವಿನ ಕಲಿಕೆಯಲ್ಲಿ ಪೂರಕ ವಾತಾವರಣ ನಿರ್ಮಾಣಗೊಳ್ಳಲಿದೆ ಎಂಬ ಆಶಯ ತಮಗಿದೆ ಎಂದರು.
ಮಕ್ಕಳಿಗೆ ಉಚಿತ ಮತ್ತು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರ ಬದ್ಧವಾಗಿದೆ. ಹಲವು ದಶಕಗಳ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಮನುಷ್ಯ ಮತ್ತು ವನ್ಯ ಪ್ರಾಣಿಗಳ ಸಂಘರ್ಷಕ್ಕೆ ನಿಯಂತ್ರಣ ಕ್ರಮ ವಹಿಸಲಾಗುತ್ತಿದೆ. ಚಂದ್ರಗುತ್ತಿ ದೇವಳ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲಾಗಿದ್ದು, ಶೀಘ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇನ್ನಷ್ಟು ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಲಾಗುವುದು. ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ನಿಯಂತ್ರಣಕ್ಕೂ ಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿರುವ ಮಂಗನಕಾಯಿಲೆ, ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗ ಅವುಗಳ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದು, ಸಂಶೋಧನಾ ಚಟುವಟಿಕೆಗಳಿಗೆ ಸರ್ಕಾರದ ಅನುದಾನ ಬಿಡುಗಡೆಗೊಳಿಸಿದೆ. ಗಾಂಜಾ, ಅಫೀಮು ಮತ್ತಿತರ ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಂತ್ರಣ ಕಾರ್ಯದಲ್ಲಿ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನಸ್ನೇಹಿಯಾಗಿವೆ. ಇದರಿಂದಾಗಿ ರಾಜ್ಯದ ಜಿಡಿಪಿ ದರದಲ್ಲಿ ಗಣನೀಯ ಏರಿಕೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಆರ್.ಪ್ರಸನ್ನಕುಮಾರ್, ಚಂದ್ರಭೂಪಾಲ, ಬಂಡಿ ರಾಮಚಂದ್ರ, ರವಿಕುಮಾರ್, ಮಧು, ದೇವಿಪ್ರಸಾದ್, ಜಿ.ಡಿ.ಮಂಜುನಾಥ್, ಬಷೀರ್ ಅಹ್ಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

