ಬೆಂಗಳೂರು: ರಾಜ್ಯದ ಎಲ್ಲಾ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಕಾಯಂ ಬೋಧಕ ಬೋಧಕೇತರ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಬಾಗಲೂರಿನಲ್ಲಿ ಆರಂಭಿಸಿರುವ ನೂತನ ಸ್ನಾತಕೋತ್ತರ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಎಲ್ಲಾ ವಿವಿಗಳಲ್ಲಿ ಖಾಲಿ ಇರುವ ಕಾಯಂ ಬೋಧಕ ಬೋಧಕೇತರ ಹುದ್ದೆಗಳ ಭರ್ತಿ ಮಾಡುವುದರ ಜೊತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು. ಸರ್ಕಾರ ಕೌಶಲ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ 30,000 ರೂ.ಪ್ರೋತ್ಸಾಹ ಧನ ನೀಡಲು ಅಜೀಮ್ ಪ್ರೇಮ್ ಜಿ ಪ್ರತಿಷ್ಠಾನದ ನೆರವಿನೊಂದಿಗೆ ದೀಪಿಕಾ ಯೋಜನೆ ಆರಂಭಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ವಿದೇಶಿ ಶಿಕ್ಷಣ ಪಡೆಯಲು ವಿದೇಶಿ ವಿವಿಗಳ ಜೊತೆಗೂ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆ ವಹಿಸಿದ್ದರು. ಕುಲಪತಿ ಬಿ. ರಮೇಶ್, ಕುಲ ಸಚಿವರಾದ ಎ. ನವೀನ್ ಜೋಸೆಫ್, ರಮೇಶ್ ಬಿ. ಕುಡೇನಟ್ಟಿ, ಹಣಕಾಸು ಅಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಸೇರಿದಂತೆ ಹಲವರಿದ್ದರು.

