ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಸಿದ್ಧವಾಗಿದ್ದ ರಾಜ್ಯ ಕ್ರಿಕೆಟ್ ಸಂಸ್ಥೆಗೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ.
ಬುಧವಾರ ಚಿನ್ನಸ್ವಾಮಿ ಕ್ರೀಡೆಯಲ್ಲಿ ದೆಹಲಿ -ಆಂಧ್ರಪ್ರದೇಶ ನಡುವೆ ವಿಜಯ ಹಜಾರೆ ಟೂರ್ನಿಯ ಪಂದ್ಯ ನಡೆಯಬೇಕಿತ್ತು. ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಪಂದ್ಯವನ್ನು ನಗರದ ಹೊರವಲಯದ ದೇವನಹಳ್ಳಿ ಸಮೀಪದ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಗೆ ಸ್ಥಳಾಂತರ ಮಾಡಲಾಗಿದೆ. ಅಲ್ಲಿಯೂ ಪ್ರೇಕ್ಷಕರಿಗೆ ಅನುಮತಿ ನೀಡಿಲ್ಲ.
ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮತ್ತೆ ಮಹತ್ವದ ಪಂದ್ಯ ನಡೆಯುವುದನ್ನು ಎದುರು ನೋಡುತ್ತಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಮುಂದಿನ ಐಪಿಎಲ್ ಪಂದ್ಯಗಳ ಮೇಲೂ ಪರಿಣಾಮ ಬೀರಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಸರ್ಕಾರ ಸಮ್ಮತಿಸಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಸಂಬಂಧಪಟ್ಟಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿದ್ದು, ಈ ಸಮಿತಿಯಲ್ಲಿ ಪೋಲಿಸ್, ಅಗ್ನಿಶಾಮಕ ಇಲಾಖೆ, ಬೆಸ್ಕಾಂ ಸೇರಿದಂತೆ ಇತರೆ ಇಲಾಖೆಗಳು ಸದಸ್ಯರಾಗಿದ್ದು, ಕ್ರೀಡಾಂಗಣದ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗಿದೆ.
ಕ್ರಿಕೆಟ್ ಪಂದ್ಯ ಆಯೋಜನೆಗೆ ಸಮಿತಿ ಸಹಮತ ವ್ಯಕ್ತಪಡಿಸಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಅನುಮತಿ ನಿರಾಕರಿಸಿದ್ದರಿಂದ ಪಂದ್ಯ ಸ್ಥಳಾಂತರ ಮಾಡಲಾಗಿದೆ.

