ಶಿವಮೊಗ್ಗ: ಅಡಿಕೆ ತೋಟದಲ್ಲಿ ಗೊನೆ ಕೊಯ್ಯುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡ್ರಳ್ಳಿಯಲ್ಲಿ ಘಟನೆ ನಡೆದಿದೆ. ಪುಟ್ಟಸ್ವಾಮಿ(48) ಮೃತಪಟ್ಟ ಕೂಲಿ ಕಾರ್ಮಿಕ. ಮಂಡ್ರಳ್ಳಿ ಗ್ರಾಮದ ಉಡುಪ ಅವರ ಅಡಿಕೆ ತೋಟದಲ್ಲಿ ದೋಟಿಯಿಂದ ಅಡಿಕೆ ಗೊನೆ ಕೊಯ್ಯುತ್ತಿದ್ದಾಗ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿಗೆ ದೋಟಿ ಸ್ಪರ್ಶಿಸಿದೆ. ಅದರ ಮೂಲಕ ವಿದ್ಯುತ್ ಪ್ರವಹಿಸಿ ಪುಟ್ಟಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಮಿಕನಿಗೂ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ತಿಳಿದ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮೃತ ಕಾರ್ಮಿಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ. ಅಲ್ಲದೆ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳು ಕಾರ್ಮಿಕನಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿದ್ದಾರೆ.

