ಬೆಂಗಳೂರು: ಮುಂಬರುವ ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಹೊಂದಾಣಿಕೆ ಸಾಧ್ಯವಿಲ್ಲ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಮುಂದುವರೆಯಲಿದೆ ಎಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧಿಸಲಿದೆ ಎಂದು ದೇವೇಗೌಡರು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಏಕಾಂಗಿಯಾಗಿ ಅಧಿಕಾರಕ್ಕೆರಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ ಬೆನ್ನಲ್ಲೇ ದೇವೇಗೌಡರಿಂದ ಈ ಹೇಳಿಕೆ ಬಂದಿದೆ.
ಸ್ವಂತ ಬಲದಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ನನ್ನ ವಿರೋಧವಿಲ್ಲ. ಅವರು ಯಂಗ್ ಸ್ಟರ್. ಉತ್ಸಾಹದಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಾತ್ರ ಬಿಜೆಪಿ ಜೆಡಿಎಸ್ ಮೈತ್ರಿ ಇರಲಿದೆ ಎಂದು ದೇವೇಗೌಡರು ಹೇಳಿದ್ದಾರೆ.
ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಕೇಂದ್ರ ಸರ್ಕಾರದಲ್ಲಿ ಜೆಡಿಎಸ್ ಜೊತೆಗೆ ನಮ್ಮ ಹೊಂದಾಣಿಕೆ ಇದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಇರಬಾರದು. ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು, ಮಾಜಿ ಸಿಎಂ ಸೇರಿದಂತೆ ಎಲ್ಲರ ಜೊತೆಗೆ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.

