HomeLatest News8 ಲಕ್ಷ ರೂ.ಗೂ ಅಧಿಕ ವಹಿವಾಟು ನಡೆಸುವವರ ಬಿಪಿಎಲ್ ಕಾರ್ಡ್ ರದ್ದು: ನಿಯಮ ಬದಲಾವಣೆಗೆ ಶಿಫಾರಸು

8 ಲಕ್ಷ ರೂ.ಗೂ ಅಧಿಕ ವಹಿವಾಟು ನಡೆಸುವವರ ಬಿಪಿಎಲ್ ಕಾರ್ಡ್ ರದ್ದು: ನಿಯಮ ಬದಲಾವಣೆಗೆ ಶಿಫಾರಸು

ಚಿತ್ರದುರ್ಗ: ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ವರ್ಷಕ್ಕೆ ರೂ.8 ಲಕ್ಷಕ್ಕೂ ಅಧಿಕ ವಹಿವಾಟು ನಡೆಸುವವರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದ್ದು, ಇದರಿಂದ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ.

ಪೇಟಿಎಂ, ಫೋನ್ ಪೇ ಮೂಲಕ ಸಣ್ಣಪುಟ್ಟ ವ್ಯಾಪಾರಸ್ಥರು ಸಹ ಹಣ ಪಾವತಿ ಪಡೆಯುವುದರಿಂದ ವರ್ಷಕ್ಕೆ ಅವರ ವಹಿವಾಟು ರೂ.8 ಲಕ್ಷ ಮೀರುತ್ತದೆ. ಬಹಳ ಕಡಿಮೆ ಲಾಭದೊಂದಿಗೆ ವ್ಯವಹರಿಸುವ ಇವರಿಗೆ ಬಿಪಿಎಲ್ ಕಾರ್ಡು ರದ್ದತಿಯಿಂದ ತೊಂದರೆಯಾಗುತ್ತಿದೆ. ಈ ಕುರಿತು ಆಯೋಗ ಹೆಚ್ಚಿನ ಗಮನ ಹರಿಸಿದ್ದು, ನಿಯಮಗಳಿಗೆ ಸೂಕ್ತ ಮಾರ್ಪಾಡುಗಳನ್ನು ತರಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ತಿಳಿಸಿದರು.

ಕರ್ನಾಟಕ ರಾಜ್ಯ ಆಹಾರ ಆಯೋಗದಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಾಗಿದೆ. ಡಿ.31 ರಂದು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಆಯೋಗ ವಾಸ್ತವ್ಯ ಇರಲಿದ್ದು, ಜಿಲ್ಲೆಯ ಪಡಿತರ ವಿತರಣೆ, ಅಂಗನವಾಡಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿನ ಆಹಾರ ಸರಬರಾಜು ಕುರಿತು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಆಯೋಗಕ್ಕೆ ನೇರವಾಗಿ ದೂರು ಸಲ್ಲಿಸಬಹುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಭೇಟಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಸರ್ಕಾರ 14 ಇಲಾಖೆಗಳ ವ್ಯಾಪ್ತಿಗೆ ಬರುವಂತಹ ಆಹಾರ ವಿತರಣೆ ಹಾಗೂ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಆಯೋಗ ಮೇಲ್ವಿಚಾರಣೆ ನಡೆಸಿ ಸಮಸ್ಯೆಗಳನ್ನು ಪರಿಹರಿಸುತ್ತಿದೆ. ದುರ್ಬಲ ವರ್ಗದ ಜನರಿಗೆ ದೊರಕಬೇಕಾದ ಆಹಾರದ ಹಕ್ಕನ್ನು ಸಂರಕ್ಷಿಸಲಾಗುತ್ತಿದೆ. ಸಾರ್ವಜನಿಕರಿಂದ ಕೇಳಿ ಬಂದ ದೂರುಗಳ ಆಧಾರದಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಆಯೋಗದಿಂದ ಪ್ರವಾಸ ಕೈಗೊಳ್ಳಲಾಗುತ್ತಿದೆ. ಆಯೋಗ ಭೇಟಿ ನೀಡುವ ಜಿಲ್ಲೆಯ ಬಗ್ಗೆ ಮೊದಲೇ ಮಾಹಿತಿ ನೀಡಿದರೆ, ಅಧಿಕಾರಿಗಳು ತಾತ್ಕಾಲಿಕವಾಗಿ ಸಮಸ್ಯೆಗಳನ್ನು ಮುಚ್ಚಿಡುವ ಸಂಭವವಿರುತ್ತದೆ. ಈ ಹಿನ್ನಲೆಯಲ್ಲಿ ಅಧಿಕೃತವಾಗಿ ಮಾಹಿತಿ ನೀಡದೆ ಪ್ರವಾಸ ಕೈಗೊಂಡು ಸಮಸ್ಯೆಗಳನ್ನು ಗುರುತಿಸಿ, ಲೋಪ, ಭ್ರಷ್ಟಾಚಾರ ಕಂಡುಬಂದರೆ ಸಂಬಂದಪಟ್ಟ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ತಿಳಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿ ನೇಮಕಕ್ಕೆ ನಿರ್ದೇಶನ:

ಜಿಲ್ಲೆಯಲ್ಲಿ ಆಹಾರ ಸರಬರಾಜು ಹಾಗೂ ವಿತರಣೆಯಲ್ಲಿ ಲೋಪದೋಷಗಳ ಕುರಿತು ಸಾರ್ವಜನಿಕರು ಅಹವಾಲು ಸಲ್ಲಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕುಂದು ಕೊರತೆ ನಿವಾರಣಾ ಅಧಿಕಾರಿಯನ್ನು ಪ್ರತ್ಯೇಕವಾಗಿ ನೇಮಿಸಲು ಅವಕಾಶವಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕಾರ್ಯಭಾರ ನೋಡಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಿದ್ದಾರೆ. ಇದೇ ಮಾದರಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿಯೂ ಕುಂದು ಕೊರತೆ ನಿವಾರಣೆ ಅಧಿಕಾರಿಯನ್ನು ನೇಮಿಸಲು ಆಯೋಗದಿಂದ ನಿರ್ದೇಶನ ನೀಡುವುದಾಗಿ ಡಾ.ಹೆಚ್.ಕೃಷ್ಣ ತಿಳಿಸಿದರು.

ಆಯೋಗದ ಮಾಹಿತಿ ಫಲಕ ಅಳವಡಿಕೆಗೆ ಸೂಚನೆ:

ನ್ಯಾಯಬೆಲೆ ಅಂಗಡಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಹಾಗೂ ಸುಗಮವಾಗಿ ಆಹಾರ ಧಾನ್ಯಗಳ ವಿತರಣೆ ಆಯೋಗ ಕ್ರಮ ಕೈಗೊಳ್ಳುತ್ತಿದೆ. ಇದಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಆಹಾರ ಇಲಾಖೆ ಅಧಿಕಾರಿಗಳ ಹೆಸರು ಹಾಗೂ ಮೊಬೈಲ್ ನಂಬರ್‍ವುಳ್ಳ ಫಲಕಗಳ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಪ್ರತಿ ನ್ಯಾಯಬೆಲೆ ಅಂಗಡಿಗಳು ಮಂಗಳವಾರ ಹೊರತುಪಡಿಸಿ ಪ್ರತಿದಿನವು ಬಾಗಿಲು ತೆರಯಬೇಕು. ಒಂದು ದೇಶ ಹಾಗೂ ಒಂದು ಪಡಿತರ ಚೀಟಿ ವ್ಯವಸ್ಥೆ ಜಾರಿಯಲ್ಲಿದೆ. ಯಾರೇ ವಲಸಿಗ ಕಾರ್ಮಿಕರು ಹತ್ತಿರದ ಪಡಿತರ ಅಂಗಡಿಯಲ್ಲಿ ಆಹಾರ ಧಾನ್ಯಗಳನ್ನು ಪಡೆಯಬಹುದು. ಉಚಿತ ಆಹಾರ ಧಾನ್ಯಗಳೊಂದಿಗೆ ಸೋಪು, ಎಣ್ಣೆ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಒತ್ತಾಯ ಮಾಡುವಂತಿಲ್ಲ ಎಂದು ಡಾ.ಹೆಚ್.ಕೃಷ್ಣ ಸ್ಪಷ್ಟಪಡಿಸಿದರು.

ಕಡ್ಡಾಯ ಮೊಟ್ಟೆ ವಿತರಣೆಗೆ ಸೂಚನೆ: 

ಕೆಲವು ಶಾಲೆಗಳಲ್ಲಿ ಬಿಸಿಯೂಟದ ಸಂದರ್ಭದಲ್ಲಿ ಮೊಟ್ಟೆ ವಿತರಣೆ ಮಾಡದಿರುವುದು ಆಯೋಗದ ಗಮನಕ್ಕೆ ಬಂದಿದೆ. ಪೌಷ್ಠಿಕ ಆಹಾರವಾದ ಮೊಟ್ಟೆ, ಮಕ್ಕಳ ದೈಹಿಕ ಬೆಳವಣಿಗೆಗೆ ಅಗತ್ಯವಾಗಿದೆ. ಶಾಲೆಗಳಲ್ಲಿ ತಾರತಮ್ಯ ಮಾಡದೆ ಕಡ್ಡಾಯವಾಗಿ ಮೊಟ್ಟೆ ವಿತರಣೆಗೆ ಆಯೋಗದಿಂದ ಸೂಚನೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿಯರು ಹಾಗೂ 3 ವರ್ಷದ ಒಳಗಿನ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಈ ಆಹಾರದ ಗುಣಮಟ್ಟ ಕಾಪಾಡುವಂತೆ ನಿರ್ದೇಶನ ನೀಡಲಾಗಿದೆ ಎಂದು ಡಾ.ಹೆಚ್.ಕೃಷ್ಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಮಾರುತಿ ಎಂ. ದೊಡ್ಡಲಿಂಗಣ್ಣನವರ, ಕೆ.ಎಸ್.ವಿಜಯಲಕ್ಷ್ಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಕೆ.ಎಸ್.ಸಿ.ಎಸ್.ಇ ಜಿಲ್ಲಾ ವ್ಯವಸ್ಥಾಪಕ ಎಸ್.ಕೆ.ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular