ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಬೆನ್ನಲ್ಲೇ ಕಾಲೇಜು ಹಾಗೂ ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರಿಗೂ ಋತುಚಕ್ರ ರಜೆ ನೀಡುವಂತೆ ಒತ್ತಾಯಗಳು ಕೇಳಿಬಂದಿವೆ. ಈ ವಿಚಾರವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಮುಖ್ಯಮಂತ್ರಿಗಳು ಸೂಚನೆ ಕೊಟ್ಟರೆ ಮಾಡುತ್ತೇವೆ. ಈ ವಿಚಾರವಾಗಿ ಸಿಎಂ ಆದೇಶವೇ ಅಂತಿಮ ಎಂದು ಸಚಿವ ಸ್ಪಷ್ಟಪಡಿಸಿದ್ದಾರೆ.
ಇನ್ನು ಶುಲ್ಕ ಹೆಚ್ಚಳ ವಿಚಾರವಾಗಿ ಎಂಜಿನಿಯರ್ ಮತ್ತು ಮೆಡಿಕಲ್ ಸೀಟು ಶುಲ್ಕ ಹೆಚ್ಚಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಕಾಲೇಜು ಮಟ್ಟದಲ್ಲಿ ಚುನಾವಣೆಗಳನ್ನು ನಡೆಸುವ ಉದ್ದೇಶವಿದೆ. ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳೆದುಬಂದಿದ್ದಾರೆ. ಹಾಅಗಾಗಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಆಲೋಚನೆ ಇದೆ ಎಂದು ತಿಳಿಸಿದ್ದಾರೆ.

