ಬೆಂಗಳೂರು: ದೌರ್ಜನ್ಯ, ನಿರ್ಲಕ್ಷ್ಯ ಅಥವಾ ಶೋಷಣೆಗೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ನೆರವು ಮತ್ತು ರಕ್ಷಣೆ ಒದಗಿಸಿ ಭಯ ಮುಕ್ತ ವಾತಾವರಣವನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ಕ ಪಡೆಯನ್ನು ರಾಜ್ಯದ 30 ಜಿಲ್ಲೆ ಮತ್ತು 5 ಪೊಲೀಸ್ ಆಯುಕ್ತಾಲಯಗಳಲ್ಲಿ ಸ್ಥಾಪಿಸಿ, ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಅರಿವು, ತಕ್ಷಣದ ರಕ್ಷಣೆ ಮತ್ತು ಅಗತ್ಯ ನೆರವು ನೀಡಲು ಉದ್ದೇಶಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಬಾಲ್ಯ ವಿವಾಹದ ಪ್ರಕರಣಗಳ ತಡೆ, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆದು ರಕ್ಷಣೆ ನೀಡುವ ದೃಷ್ಟಿಯಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಕ್ಕಪಡೆಯನ್ನು ಪ್ರಾಯೋಗಿಕವಾಗಿ ರಚಿಸಿ ಕಾರ್ಯನಿರ್ವಹಿಸುತ್ತಿದ್ದು, ಉದ್ದೇಶಿತ ಕಾರ್ಯಗಳಲ್ಲಿ ಯಶಸ್ವಿಯಾಗಿರುವುದರಿಂದ ರಾಜ್ಯಾದ್ಯಂತ ಅಕ್ಕಪಡೆಯನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

