ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು ಲೇಔಟ್ ಫಕೀರ್ ಕಾಲೋನಿ ಮತ್ತು ವಸೀಮ್ ಬಡಾವಣೆಯಲ್ಲಿ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮ ಮಾಡಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ವರದಿ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಸತ್ಯಶೋಧನಾ ತಂಡವನ್ನು ರಚಿಸಿದ್ದರು. ಬೆಂಗಳೂರು ನಗರದಲ್ಲಿ ಸೋಮವಾರ ಸಮಿತಿ ವರದಿಯನ್ನು ಬಿ.ವೈ.ವಿಜಯೇಂದ್ರ ಅವರಿಗೆ ನೀಡಿದೆ.
ಅಕ್ರಮ ವಲಸಿಗರ ಮನೆಗಳ ತೆರವು ವಿಚಾರದಲ್ಲಿ ರಚಿಸಲಾಗಿದ್ದ ಪಕ್ಷದ ಸತ್ಯ ಶೋಧನಾ ಸಮಿತಿಯಿಂದ ವರದಿಯನ್ನು ಬಿ.ವೈ.ವಿಜಯೇಂದ್ರ ಸ್ವೀಕರಿಸಿದ್ದಾರೆ. ಶಾಸಕರಾದ ಎಸ್.ಆರ್. ವಿಶ್ವನಾಥ್ ನೇತೃತ್ವದ ಸತ್ಯಶೋಧನ ತಂಡ ಸ್ಥಳಕ್ಕೆ ಭೇಟಿ ನೀಡಿ, ವ್ಯಾಪಕವಾಗಿ ಮಾಹಿತಿ ಕಲೆ ಹಾಕಿ, ಸದರಿ ಜಾಗದ ಸಂಪೂರ್ಣ ವಿವರ, ಸರ್ವೇ ನಂಬರ್, ಗೂಗಲ್ ಮ್ಯಾಪ್, ಕಾನೂನುಗಳು ಸೇರಿದಂತೆ ಸಮಗ್ರ ವಿವರವನ್ನು ಒಳಗೊಂಡ ವರದಿಯನ್ನು ಸಲ್ಲಿಸಿದೆ.
ಸಮಿತಿಯ ಸದಸ್ಯರಾದ ಶಾಸಕ ಎಸ್.ಮುನಿರಾಜು, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಪಕ್ಷದ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ.ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳ ಪ್ರತಿಕ್ರಿಯೆ: ಈ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದರು, “ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್ಗಳನ್ನು ಡಿಸೆಂಬರ್ 20ರಂದು ತೆರವುಗೊಳಿಸಲಾಗಿತ್ತು. ಸರ್ಕಾರದ ಜಾಗವಾಗಿದ್ದರಿಂದ ಅವರೆಲ್ಲರಿಗೂ ನೋಟಿಸ್ ನೀಡಿ, ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ಅನಿವಾರ್ಯವಾಗಿ ತೆರವು ಮಾಡಲಾಗಿದೆ” ಎಂದು ಹೇಳಿದ್ದರು.
“ಡಿ.ಕೆ.ಶಿವಕುಮಾರ್, ವಸತಿ ಸಚಿವರಾದ ಜಮೀರ್ ಅಹ್ಮದ್, ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡ ಅವರ ಜೊತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ.23 ರಲ್ಲಿ ಸುಮಾರು 1,087 ಮನೆಗಳಿವೆ, ಅಧಿಕಾರಿಗಳಿಂದ ಅರ್ಹರ ಪಟ್ಟಿ ಬಂದ ನಂತರ ಅವರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ. ಇದು ಕೋಗಿಲು ಇಂದ ಕೇವಲ 7 ಕಿ.ಮೀ ದೂರದಲ್ಲಿದೆ” ಎಂದು ತಿಳಿಸಿದ್ದರು.
ಈ ವಿಚಾರದಲ್ಲಿ ಕೇರಳ, ದೆಹಲಿ ಮಟ್ಟದಲ್ಲಿ ಚರ್ಚೆಗಳಾಗಿತ್ತು. ಮನೆ ಕಳೆದುಕೊಂಡವರಿಗೆ ಮನೆ ನೀಡಲು ಮಾನದಂಡಗಳೇನು? ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನೆ ಮಾಡಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ, “ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಈ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ ಅವರ ಸ್ವಾಧೀನದಲ್ಲೇ ಇದೆ. ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು, ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ” ಎಂದು ಹೇಳಿದ್ದರು.
“ಇನ್ನು ಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಅಕ್ರಮವಾಗಿ ಶೆಡ್ಗಳನ್ನು ಕಟ್ಟಿ ವಾಸವಿದ್ದವರಲ್ಲಿ ಮುಂದಿನ ಎರಡು ದಿನಗಳಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ” ಎಂದು ತಿಳಿಸಿದ್ದರು.
“ಅಕ್ರಮ ಶೆಡ್ಗಳ ತೆರವುಗೊಳಿಸಿದ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದರು.

