ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರೊಂದಿಗೆ ಕೆಲಕಾಲ ಪ್ರತ್ಯೇಕ ಮಾತುಕತೆ ನಡೆಸಿದ ಅವರು ನಂತರ ಒಟ್ಟಿಗೆ ಇಬ್ಬರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಮೊದಲಿಗೆ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿಯವರೊಂದಿಗೆ ಚರ್ಚೆ ನಡೆಸಿದ್ದಾರೆ. ನಂತರ ಸಿದ್ದರಾಮಯ್ಯ ಅವರು ಆಗಮಿಸಿದ್ದು, ಅವರನ್ನು ಡಿ.ಕೆ. ಶಿವಕುಮಾರ್ ಅವರಿಂದ ದೂರಕ್ಕೆ ಕರೆದುಕೊಂಡ ಹೋದ ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ.
ಮೈಸೂರಿನಿಂದ ತಮಿಳುನಾಡು ಕಾರ್ಯಕ್ರಮಕ್ಕೆ ತೆರಳಿದ್ದ ರಾಹುಲ್ ಗಾಂಧಿ ಕೂಡ್ಲೂರು ಕಾರ್ಯಕ್ರಮ ಮುಗಿಸಿ ಮೈಸೂರಿಗೆ ಹಿಂದಿರುಗುವಾಗ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ದೆಹಲಿಗೆ ತೆರಳುವ ಮಾರ್ಗ ಮಧ್ಯೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ರಾಹುಲ್ ಗಾಂಧಿ, ಸಿಎಂ ಮತ್ತು ಡಿಸಿಎಂ ಜೊತೆಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ರಾಹುಲ್ ಗಾಂಧಿ ಮಹತ್ವದ ಸಂದೇಶ ನೀಡಿದ್ದಾರೆ. ಡಿ.ಕೆ. ಯಾವುದೇ ಚಿಂತೆ ಬೇಡ, ನಿಮ್ಮನ್ನು ದೆಹಲಿಗೆ ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ. ಏನೂ ತಲೆ ಕೆಡಿಸಿಕೊಳ್ಳಬೇಡಿ. ಶೀಘ್ರವೇ ನಿಮ್ಮನ್ನು ದೆಹಲಿಗೆ ಕರೆಯುತ್ತೇವೆ. ದೆಹಲಿಗೆ ನಿಮ್ಮನ್ನು ಆಹ್ವಾನಿಸಲಾಗುವುದು ಎಂದು ಡಿಕೆ ಜೊತೆ ಚರ್ಚೆಯ ವೇಳೆ ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ.

