ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಸುದ್ದಿಯಾಗುತ್ತಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದ ಎಂಬ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಹೇಳಿಕೆ ಆಗಾಗ ಕೇಳಿಬರುತ್ತಲೇ ಇದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಿನ್ನೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಭೇಟಿಯಾಗಿ 5 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ’ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ನ ಮರ್ಮವೇನು..? ಹೈಕಮಾಂಡ್ ಭೇಟಿ ವೇಳೆ ಏನಾದರೂ ಶುಭ ಸೂಚನೆ ಸಿಕ್ಕಿದ್ಯಾ ಎಂಬುದು ಸದ್ಯಕ್ಕಿರುವ ಕುತೂಹಲ.
ರಾಹುಲ್ ಗಾಂಧಿ ಭೇಟಿ ಬಳಿಕ ಸಿಎಂ ಹೇಳಿದ್ದೇನು..?
ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು, ಮಾರ್ಗ ಮಧ್ಯೆ ಭೇಟಿ ಮಾಡಿದ್ದೇನೆ. ಈ ಸಂದರ್ಭದಲ್ಲಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ. ಸಂಜೆ ಅವರು ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು. ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಶಾಸಕರಿಗೆ ಈ ಕುರಿತು ಮಾಹಿತಿ ಇರುವುದಿಲ್ಲ. ಈ ವಿಚಾರದಲ್ಲಿ ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು. ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು.
ಈ ವಿಚಾರದಲ್ಲಿ ನಮ್ಮ ಪಕ್ಷದ ಶಾಸಕರಿಗಿಂತ ಮಾಧ್ಯಮಗಳು ಹೆಚ್ಚು ಆಸಕ್ತಿ ತೋರುತ್ತಿವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಜನರು ನಮ್ಮನ್ನು ಆಶೀರ್ವದಿಸುತ್ತಾರೆ ಎಂಬ ವಿಶ್ವಾಸವಿದೆ. ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು. ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ.

