ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು 2024ರ ಲೋಕಸಭೆ ಚುನಾವಣೆಯಿಂದ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಂಡಿವೆ. 2028ರ ವಿಧಾನಸಭೆ ಚುನಾವಣೆಗೂ ಮೈತ್ರಿ ಮುಂದುವರಿಯುವ ಸೂಚನೆ ಇದೆ. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಇದೆಯೇ?, ಇಲ್ಲವೇ? ಎಂಬುದು ಎಲ್ಲರ ಪ್ರಶ್ನೆಯಾಗಿದೆ.
ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ), ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ಬರಲಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುವ ಕುರಿತು ಅಂತಿಮ ತೀರ್ಮಾನವಾಗಿಲ್ಲ. ಎರಡೂ ಪಕ್ಷದಲ್ಲೂ ಈ ಕುರಿತು ಮಾತುಕತೆಗಳು ನಡೆಯುತ್ತಿವೆ.
ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗೆ ಮಾತ್ರ ಬಿಜೆಪಿ-ಜೆಡಿಎಸ್ ಮೈತ್ರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ, ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಹೇಳಿದ್ದರು.
ಈ ಹೇಳಿಕೆ ಬಳಿಕ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಚರ್ಚೆಗಳು ಆರಂಭವಾಗಿದ್ದು, ಬಿಜೆಪಿ ನಾಯಕರು ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ಜೊತೆ ಈ ಕುರಿತು ಮಾತುಕತೆ ನಡೆಸಲು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.
ಸಂಕ್ರಾಂತಿ ಬಳಿಕ ಮಾತುಕತೆ: ಲೋಕಸಭೆ, ವಿಧಾನ ಪರಿಷತ್, ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆದು ಸೀಟು ಹಂಚಿಕೆಯಾಗಿದೆ. ಆದರೆ ಈಗ ಸ್ಥಳೀಯ ಸಂಸ್ಥೆಗಳಲ್ಲಿ ಸೀಟು ಹಂಚಿಕೆ ಕಗ್ಗಂಟಾಗಿದ್ದು, ಮೈತ್ರಿ ಮುಂದುವರೆಯುವ ಕುರಿತು ಅನುಮಾನ ಮೂಡಿದೆ.
ಆದ್ದರಿಂದ ಸಂಕ್ರಾಂತಿ ಬಳಿಕ ಈ ಗೊಂದಲ ಬಗೆಹರಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ. ದೆಹಲಿಯಲ್ಲಿಯೇ ಅವರು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಈ ಕುರಿತು ಚರ್ಚಿಸಲಿದ್ದಾರೆ.
ಜೂನ್ 30ರೊಳಗೆ ಜಿಬಿಎ ಚುನಾವಣೆ ಮುಗಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದ್ದರಿಂದ ಜಿಬಿಎ ಚುನಾವಣೆಯಲ್ಲಿ ಮೈತ್ರಿ ಮುಂದುವರೆಸಬೇಕು ಎನ್ನುವ ನಿಲುವನ್ನು ಕುಮಾರಸ್ವಾಮಿ ಹೊಂದಿದ್ದಾರೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮಾತನಾಡಿದ್ದ ದೇವೇಗೌಡರು, “ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಜೊತೆಗೆ ಇರುತ್ತೇವೆ. ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್ಗೆ 3 ಸ್ಥಾನ ಬಿಜೆಪಿಗೆ ನೀಡುವ ಬಗ್ಗೆ ಪ್ರಾಥಮಿಕ ಚರ್ಚೆ ಆಗಿದೆ” ಎಂದು ಹೇಳಿದ್ದರು.
“ಲೋಕಸಭೆ ಚುನಾವಣೆಯಲ್ಲಿ ಉತ್ತಮ ಮೈತ್ರಿ ಆಗಿದೆ. ಅದು ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರೆಯುತ್ತದೆ. ಆದರೆ ಪಕ್ಷವನ್ನು ಕಟ್ಟುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳ ಮುಖ್ಯವಾಗಿದೆ” ಎಂದು ತಿಳಿಸಿದ್ದರು.
“ಸ್ಥಳೀಯ ಸಂಸ್ಥೆ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲು ಆಗುತ್ತದೆಯೇ?. ಜೆಡಿಎಸ್ ಸ್ವಂತ ಶಕ್ತಿ ಬಲದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಎದುರಿಸುತ್ತದೆ” ಎಂದು ಹೇಳಿದ್ದರು.
ಈ ಹೇಳಿಕೆ ಬಳಿಕ ದೆಹಲಿಯಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, “ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಮುಂದುವರೆಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ” ಎಂದು ಸ್ಪಷ್ಟಪಡಿಸಿದ್ದರು.
ಎರಡೂ ಪಕ್ಷಗಳಲ್ಲಿ ಗೊಂದಲಗಳು ಉಂಟಾಗುತ್ತಿರುವ ಕಾರಣ ಆದಷ್ಟು ಬೇಗ ಮೈತ್ರಿ ಕುರಿತು ಗೊಂದಲ ಬಗೆಹರಿಸಲು ಕುಮಾರಸ್ವಾಮಿ ಮುಂದಾಗಿದ್ದು, ಬಿಜೆಪಿ ನಾಯಕರ ಜೊತೆ ಸಭೆಯನ್ನು ನಡೆಸಲಿದ್ದಾರೆ.

