ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ನಿರ್ದೇಶನ ನೀಡಿದೆ.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಸಿಂಧುತ್ವ ಪ್ರಶ್ನಿಸಿ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಿಂದ ಈ ಬಗ್ಗೆ ಮಧ್ಯಂತರ ಆದೇಶ ನೀಡಲಾಗಿದೆ.
ವಿಚಾರಣೆಯ ವೇಳೆಯಲ್ಲಿ ಪ್ರಮೋದಾದೇವಿ ಪರ ವಕೀಲರು, ದೇವಾಲಯದ ಆಸ್ತಿ ಮಾಲೀಕತ್ವ ವಿವಾದ ಇದೇ ಹೈಕೋರ್ಟ್ ನ ವಿಭಾಗೀಯ ನ್ಯಾಯ ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ. ಈ ನಡುವೆ ರಾಜ್ಯ ಸರ್ಕಾರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ ತಂದಿದೆ. ಈ ಪ್ರಾಧಿಕಾರ ಅರ್ಜಿದಾರರಿಗೆ ಯಾವುದೇ ಸಭೆಯ ನೋಟಿಸ್ ಗಳನ್ನು ನೀಡುತ್ತಿಲ್ಲ. ದೇವಾಲಯ ಆವರಣದಲ್ಲಿ ಕೆಲವು ಶಾಶ್ವತ ನಿರ್ಮಾಣಗಳ ಕಾಮಗಾರಿ ನಡೆಸುತ್ತಿದೆ ಎಂದು ದೂರಿದ್ದಾರೆ.
ಇದಕ್ಕೆ ಸರ್ಕಾರಿ ವಕೀಲರು, ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ದೇವಾಲಯ ಆವರಣದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಡೆಸುವುದಿಲ್ಲ. ಬೇಸಿಗೆ ಸಮೀಪಿಸುತ್ತಿರುವುದರಿಂದ ಭಕ್ತರ ಹಿತ ದೃಷ್ಟಿಯಿಂದ ತಂಗುದಾಣ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಅರ್ಜಿಯ ಮುಂದಿನ ವಿಚಾರಣೆ ದಿನಾಂಕದವರೆಗೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡಬಾರದು. ಕೇಂದ್ರ ಸರ್ಕಾರದ ಯೋಜನೆಯಡಿ ಯಾವ ರೀತಿಯ ಕಾಮಗಾರಿಗಳಿಗೆ ಅವಕಾಶವಿದೆ. ಆ ಯೋಜನೆ ಮತ್ತು ಅದರ ಜಾರಿ ವಿಧಾನದ ಬಗ್ಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ವಿಚಾರಣೆಯನ್ನು ಫೆಬ್ರವರಿ 13ಕ್ಕೆ ಮುಂದೂಡಲಾಗಿದೆ.

