ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಆಗುವ ಸಂಭವವಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರದಿಂದ ಮೋಡ ಕವಿದ ವಾತಾವರಣ ಕಂಡುಬಂದಿದೆ. ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ ಭಾಗದಲ್ಲಿ ಜನವರಿ 26, 27ರಂದು ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಂಭವವಿದೆ.
ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಳಗಾವಿ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಧಾರವಾಡ ಸೇರಿ ಉತ್ತರ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮೋಡ ಕವಿದ ವಾತಾವರಣ, ತಂಪಾದ ಗಾಳಿ ಬೀಸುತ್ತಿರುವುದು ಸೇರಿ ಇತರೆ ಕಾರಣಗಳಿಂದ ಚಳಿ ತೀವ್ರತೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

