ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಡಿ ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ಅಂತ್ಯದೊಳಗೆ ಗೋನೂರುವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ತಿಳಿಸಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಯೋಜನೆಯ ಬಾಕಿ ಕಾಮಗಾರಿಗಳಿಗಾಗಿ 200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸರ್ಕಾರ ಭರವಸೆ ನೀಡಿದೆ. ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕುಗಳ ಒಟ್ಟು 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವ 2677 ಕೋಟಿ ರೂ.ಗಳ ಬೃಹತ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಕೃಷಿ ಸಾಧನೆಯಲ್ಲಿ ಜಿಲ್ಲೆ ನಂಬರ್ 1
ಜಿಲ್ಲೆಯ ರೈತರ ಸಾಧನೆಯನ್ನು ಶ್ಲಾಘಿಸಿದ ಸಚಿವರು, 2025-26ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಯು 48,682 ಟನ್ ಸಿರಿಧಾನ್ಯ ಉತ್ಪಾದಿಸುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ತೋಟಗಾರಿಕೆ ಮತ್ತು ಸಣ್ಣ ನೀರಾವರಿ ಇಲಾಖೆಗಳ ಮೂಲಕ ಸಾವಿರಾರು ರೈತರಿಗೆ ಕೋಟ್ಯಂತರ ರೂಪಾಯಿಗಳ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.
ಕೈಗಾರಿಕೆ ಮತ್ತು ರೈಲ್ವೆ ಅಭಿವೃದ್ಧಿ
ಜಿಲ್ಲೆಯ ಕೈಗಾರಿಕೆ ಅಭಿವೃದ್ದಿಗೆ ವೇಗ ನೀಡಿದ್ದು ಹಿರಿಯೂರು ತಾಲ್ಲೂಕಿನ ಮೇಟಿಕುರ್ಕಿ ಬಳಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಯಾಗಲಿದ್ದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ದೊರೆಯಲಿದೆ. ದಾವಣಗೆರೆ-ತುಮಕೂರು ನೇರ ರೈಲು ಮಾರ್ಗಕ್ಕಾಗಿ ಸರ್ಕಾರ 1,211 ಎಕರೆ ಜಮೀನು ಹಸ್ತಾಂತರಿಸಿದ್ದು, ಡಿಸೆಂಬರ್ 2027ರ ವೇಳೆಗೆ ಈ ಯೋಜನೆ ಪೂರ್ಣಗೊಂಡು ರೈಲು ಸಂಚಾರ ಆರಂಭವಾಗಲಿದೆ ಎಂದು ಭರವಸೆ ನೀಡಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸತತ 5 ವರ್ಷಗಳ ಕಾಲ ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆಗಾಗಿ ಸಂಸ್ಥೆ ವತಿಯಿಂದ ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರವನ್ನು ಚಿತ್ರದುರ್ಗ ಘಟಕದ ಚಾಲಕ ಮನೋಹರ್ ಆರ್. ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಿ, ಗೌರವಿಸಿದರು.
ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನ
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ 14 ಮಂದಿ ಅಧಿಕಾರಿಗಳು ಹಾಗೂ ನೌಕರರನ್ನು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಇದೇ ವೇಳೆ ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿಗೆ ಭಾಜನರಾದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಕೆ.ಎಸ್.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಭೋವಿ ನಿಗಮದ ಅಧ್ಯಕ್ಷ ವಿ.ರಾಮಪ್ಪ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರಿದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯಕ್ ಇದ್ದರು.

