ಬೆಂಗಳೂರು: ಒಂದೆಡೆ ಕಾಂಗ್ರೆಸ್ ಸರ್ಕಾರದ ನಾಯಕರೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದೆಡೆ ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ರಾಅಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ನರೇಗಾ ಯೋಜನೆಗೆ ವಿಬಿಜಿ ರಾಮ್ ಜಿ ಎಂದು ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ನರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜಭವನ ಚಲೋ ನಡೆಸಲು ಯೋಜನೆ ರೂಪಿಸಿದ್ದಾರೆ. ಈ ನಡುವೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಸಾರಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ-ಜೆಡಿಸ್ ನಾಯಕರು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜಂಟಿ ಅಧಿವೇಶನದಲ್ಲಿ ಭಾಷಣ ಓದದೇ ತೆರಳಿದ ರಾಜ್ಯಪಾಲರನ್ನು ಅಡ್ದಗಟ್ಟಿ, ಗೂಂಡಾ ವರ್ತನೆ ಮೆರೆದ ಕಾಂಗ್ರೆಸ್ ನಾಯಕರ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ..
ಅಲ್ಲದೇ ಲಂಚಾವತಾರದಲ್ಲಿ ಮುಳುಗಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಸರ್ಕಾರ ಕೂಡಲೇ ಅಬಕಾರಿ ಸಚಿವರ ರಾಜೀನಾಮೆ ಪಡೆದು, ತನಿಖೆಗೆ ಆದೇಶ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದಲ್ಲಿ ಆಡಳಿತ ಪಕ್ಷವೇ ಪ್ರತಿಭಟನೆಗೆ ಕುಳಿತಿರುವುದು ಬೇಲಿಯೇ ಎದ್ದು ಹೊಲ ಮೆಯ್ದಂತೆ ಭಾಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸರ್ಕಾರದ ನಾಯಕರೇ ಇಂದು ಬಿದಿಗಿಳಿದು ಹೋರಾಡುತ್ತಿದ್ದಾರೆ ಎಂದರೆ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಮುಖ್ಯಮಂತ್ರಿಗಳು ಕಾಂಗ್ರೆಸ್ ನಾಯಕರನ್ನು ಕರೆದು ಬುದ್ಧಿ ಹೇಳುವುದು ಬಿಟ್ಟು ಬೆಂಬಲ ನೀಡುತ್ತಿದ್ದಾರೆ. ಇವರಿಗೆ ಕಿಂಚಿತ್ತೂ ನಾಚಿಕೆ, ಮಾನ-ಮರ್ಯಾದೆ ಇಲ್ಲ. ಸಚಿವರುಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅಬಕಾರಿ ಸಚಿವರು ಲಂಚಕ್ಕೆ ಬೇಡಿಕೆ ಇಡುತ್ತಿರುವ ಬಗ್ಗೆ ಲಿಕ್ಕರ್ ವ್ಯಾಪಾರಿಗಳು, ಅಧಿಕಾರಿಗಳೇ ಸಾಕ್ಷ್ಯ ನೀಡುತ್ತಿದ್ದಾರೆ. ಇಷ್ಟಾದರೂ ಸಚಿವರ ವಿರುದ್ಧ ಕ್ರಮ ಕೈಗೊಂಡಿಲ್ಲ.
ಲಂಚಾವತಾರದಲ್ಲಿ ಮುಳುಗಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಸಚಿವಸ್ಥಾನದಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡುತ್ತಾ ಕುಳಿತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವವರೇ ಪ್ರತಿಭಟನೆ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

