ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಕರೆ ನೀಡಿರುವ ಬೆಂಗಳೂರು ಚಲೋ ಹೋರಾಟಕ್ಕೆ ಕೆ.ಎಸ್.ಆರ್.ಟಿ.ಸಿ ಬಿಗ್ ಶಾಕ್ ನೀಡಿದೆ. ಮುಷ್ಕರದಲ್ಲಿ ಭಾಗಿಯಾಗದಂತೆ ಸಾರಿಗೆ ಸಿಬ್ಬಂದಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ.
ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಲ್ಕು ನಿಗಮಗಳ ಸಾರಿಕೆ ನೌಕರರು ಹಾಗೂ ಸಿಬ್ಬಂದಿಗಳು ಜನವರಿ 29ರಂದು ಮುಷ್ಕರ ನಿಟ್ಟಿನಲ್ಲಿ ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಷ್ಕರ ತಡೆಯುವ ನಿಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ ಎಂ.ಡಿ ಸಾರಿಗೆ ಸಿಬ್ಬಂದಿಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಜನವರಿ 29ರಂದು ಗುರುವಾರ ಡ್ಯೂಟಿಗೆ ಬಾರದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಕೆ.ಎಸ್.ಆರ್.ಟಿ.ಸಿ ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ.
01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಬಾಕಿ ಹಾಗೂ 01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದಕ್ಕೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿಯು ಜನವರಿ 29ರ ಗುರುವಾರ ಬೆಂಗಳೂರು ಚಲೋಗೆ ಕರೆ ನೀಡಿದೆ. ಈ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಕೆ.ಎಸ್.ಆರ್.ಟಿ.ಸಿ ಎಂಡಿ ಅಕ್ರಂ ಪಾಷ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡುವಂತಿಲ್ಲ. ಕೆಲಸಕ್ಕೆ ಗೈರು ಹಾಜರಾಗುವ ನೌಕರರು, ಸಿಬ್ಬಂದಿಗಳ ವಿರುದ್ಧ ‘ನೋ ವರ್ಕ್ ನೋ ಪೇ’ ಜಾರಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

