HomeLatest Newsಸಿನಿಮಾ ಸಮಾಜದ ಅಂಕುಡೊಂಕು ತಿದ್ದುವ ಸಾಧನವಾಗಲಿ: ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ ನೀಡಿದ ಸಿಎಂ

ಸಿನಿಮಾ ಸಮಾಜದ ಅಂಕುಡೊಂಕು ತಿದ್ದುವ ಸಾಧನವಾಗಲಿ: ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ ನೀಡಿದ ಸಿಎಂ

ಬೆಂಗಳೂರು: ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕು ತಿದ್ದುವ ಸಾಧನವಾಗಲಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರ್ಥಪೂರ್ಣ ಸಿನಿಮಾಗಳ ಪ್ರದರ್ಶನದೊಂದಿಗೆ, ಅವುಗಳ‌ ಆಶಯಗಳು ಹೆಚ್ಚೆಚ್ಚು ಜನರನ್ನು ತಲುಪುವ ಮೂಲಕ ಈ ವರ್ಷದ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು ಎಂದರು.

ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವೇದಿಕೆಯಾಗಲಿ. ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರಗಳು ಒಂದು ಮಾಧ್ಯಮ‌ವಾಗಿ ನೆರವಾಗಬೇಕು ಎಂದರು.

ಇತರೆ ದೇಶಗಳಲ್ಲಿ‌ನ‌ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ಚಲಚಿತ್ರದಿಂದ ಸಾಧ್ಯವಿದೆ. ಸಮಾಜಮುಖಿ ಸಿನಿಮಾ ಮಾಡುವವರಿಗೆ, ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಸಿದ್ಧವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದರು.

ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ‌ ಪರವಾಗಿ ಹೋರಾಡುತ್ತಿದ್ದಾರೆ. ಇವರ ಈ ಸಾಮಾಜಿಕ ಬದ್ಧತೆ ಅಭಿನಂದನೀಯ ಮತ್ತು ಅನುಕರಣೀಯ ಎಂದರು.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಈ ಸಲದ BIFFes ನ ರಾಯಭಾರಿ, ಬಹುಭಾಷಾ ನಟ ಪ್ರಕಾಶ್ ರಾಜ್, ಖ್ಯಾತ ನಟಿ ರುಕ್ಮಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯ ಚಿದಾನಂದ ಪಟೇಲ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular