ಬೆಂಗಳೂರು: ಹಾವೇರಿಯಲ್ಲಿ ಫೆಬ್ರವರಿ 13ರಂದು ನಡೆಯುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲಾಗುವುದು. ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲು ಮುಂದಿನ ವಾರದೊಳಗೆ ಹಕ್ಕು ಪತ್ರ ಸೇರಿದಂತೆ ಎಲ್ಲ ದಾಖಲೆ ಸಿದ್ಧ ಮಾಡಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಗುರುವಾರ ವರ್ಚುಯಲ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿರುವ ಹಾಡಿ, ಹಟ್ಟಿ, ತಾಂಡಾ ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳು ಸರ್ಕಾರಿ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಇಂತಹ ವಸತಿ ಪ್ರದೇಶಗಳಿಗೆ ಕಂದಾಯ ಗ್ರಾಮಗಳ ಸ್ಥಾನಮಾನ ನೀಡಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲು 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರಡಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

