ಶಿವಮೊಗ್ಗ: 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ ವಿಠಲ ಲೋಕಾಯುಕ್ತ ಬಲೆಗೆ ಬಿದ್ದವನು. ಶಿಕಾರಿಪುರ ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್ ನಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಜಂಬೂರಿನ ಜಿಕ್ರಿಯಾ ಬೇಗ್ ಎಂಬುವವರು ತನ್ನ ತಂದೆಯ ವಿಲ್ ಪತ್ರದಂತೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ವಿಠಲ, 4 ಲಕ್ಷ ರೂಪಾಯಿ ಲಂಚ ಕೇಳಿದ್ದ. ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. 1 ಲಕ್ಷ ರೂಪಾತಿ ಮುಂಗಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ ಪಿ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಶಕ್ಕೆ ಪಡೆದಿರುವ ಗ್ರಾಮ ಲೆಕ್ಕಾಧಿಕಾರಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

