ದಾವಣಗೆರೆ : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಚಾಲಕ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಕೊಗ್ಗನೂರು ಗ್ರಾಮದ ಬಳಿ ನಡೆದಿದೆ.
ಹೆದ್ದಾರಿಯ ಬದಿಯಲ್ಲಿ ಲಾರಿಯೊಂದು ನಿಂತಿತ್ತು. ಈ ವೇಳೆ ವೇಗವಾಗಿ ಬಂದ ಮತ್ತೊಂದು ಲಾರಿ, ನಿಂತಿದ್ದ ಲಾರಿಯ ಹಿಂಭಾಗಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಚಲಿಸುತ್ತಿದ್ದ ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಮೃತಪಟ್ಟ ಚಾಲಕನನ್ನು ಬೆಂಗಳೂರು ಮೂಲದ ನಿಸಾರ್ (52) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ನಿಸಾರ್ ಅವರು ಲಾರಿಯ ಕ್ಯಾಬಿನ್ ಒಳಗೆ ಸಿಲುಕಿಕೊಂಡಿದ್ದರು ಎನ್ನಲಾಗಿದೆ.ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಪಘಾತಕ್ಕೆ ಸಂಬಂಧಿಸಿದಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.ಅಪಘಾತದ ಕಾರಣ ಹೆದ್ದಾರಿಯಲ್ಲಿ ಸ್ವಲ್ಪ ಸಮಯ ಸಂಚಾರ ವ್ಯತ್ಯಯ ಉಂಟಾಗಿತ್ತು, ನಂತರ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

