ಬೆಂಗಳೂರು: ಕನ್ನಡ ಪರ ಹೋರಾಟಗಾರನ ಮೇಲೆ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ ಆರೋಪದ ಮೇಲೆ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರ ವಿರುದ್ಧ ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಕಲಾಗಿದೆ.
ಕನ್ನಡ ಹೋರಾಟಗಾರ ಬೈರಪ್ಪ ಹರೀಶ್ ಕುಮಾರ್ ನಗರದ 48ನೇ ಎಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣದ ದಾಖಲಿಸಿದ್ದರು. ಕೋರ್ಟ್ ಸೂಚನೆ ಮೇರೆಗೆ ಪೊಲೀಸರು ಫೆಬ್ರವರಿ 2ರಂದು ವಸಂತ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ ನಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಚರ್ಚೆಯ ವೇಳೆ ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ವಸಂತ ಗಿಳಿಯಾರ್ ಜತೆ ಚರ್ಚೆ ನಡೆಸಲಾಗಿತ್ತು. ಈ ವೇಳೆ ಇಬ್ಬರ ನಡುವೆ ಭಿನ್ನಾಭಿಪ್ರಾಯ, ವಾಗ್ವಾದ ನಡೆದಿತ್ತು. ಕಾರ್ಯಕ್ರಮ ಮುಗಿಸಿ ಹೊರಬಂದ ಭೈರಪ್ಪ ಹರೀಶ್ ಕುಮಾರ್ ವಿರುದ್ಧ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಅವರ ಆಪ್ತರು ಹಲ್ಲೆ ನಡೆಸಲು ಮುಂದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

