ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ವಿವಿಧ ಇಲಾಖೆಗಳಿಂದ ಬಾಕಿ ಉಳಿಸಿಕೊಂಡ 37 ಸಾವಿರ ಕೋಟಿ ರೂಪಾಯಿ ಬಿಡುಗಡೆಗೆ ಆಗ್ರಹಿಸಿ ಮಾರ್ಚ್ 5ರಂದು ರಾಜ್ಯ ಗುತ್ತಿಗೆದಾರರ ಸಂಘ ಮುಷ್ಕರ ಕೈಗೊಂಡಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ಕೈಗೊಂಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಾಕಿ ಬಿಡುಗಡೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಮುಷ್ಕರ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥ್ ತಿಳಿಸಿದ್ದಾರೆ.
2022 -23, 2023 -24, 2024-25 ಮತ್ತು 2025- 26 ನೇ ಸಾಲಿನಲ್ಲಿ ವಿವಿಧ ಇಲಾಖೆಗಳು 37 ಸಾವಿರ ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಹಲವು ಬಾರಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು, ಸಚಿವರು, ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರೂ ಪ್ರಯೋಜನವಾಗಿಲ್ಲ. ಬಾಕಿ ಮೊತ್ತ ಬಿಡುಗಡೆ ಮಾಡುವುದಾಗಿ ಲೋಕೋಪಯೋಗಿ ಸಚಿವರು, ಉಪಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಆದರೆ, ಬಾಕಿ ಮೊತ್ತ ಬಿಡುಗಡೆಯಾಗಿಲ್ಲ. ಹೀಗಾಗಿ ಕಾಮಗಾರಿ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

