ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಯಲು ಒಪ್ಪಿಗೆ ನೀಡಲಾಗಿದೆ.
ಈ ಮೂಲಕ ಆರ್.ಸಿ.ಬಿ. ಅಭಿಮಾನಿಗಳು, ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದ ಹಿನ್ನೆಲೆಯಲ್ಲಿ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳಿಗೆ, 30-35 ಸಾವಿರ ಜನ ಸೇರುವ ಬಗ್ಗೆ ಅನುಮತಿ ನೀಡಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಕೆ.ಎಸ್.ಸಿ.ಎ. ಮನವಿ ಮೇರೆಗೆ ಸರ್ಕಾರ ಪರಿಶೀಲನೆ ನಡೆಸಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಿದೆ. ಕೇಸ್ ಗಳನ್ನು ವಾಪಸ್ ಪಡೆಯಲು ಬೇಡಿಕೆ ಇಟ್ಟಿರುವ ಆರ್.ಸಿ.ಬಿ. ಮ್ಯಾನೇಜ್ಮೆಂಟ್ ಒಪ್ಪುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

