ನವದೆಹಲಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಚುನಾವಣಾ ಅಕ್ರಮ ಆರೋಪ ಪ್ರಕರಣದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇದರಿಂದ ಶಾಸಕ ಯತ್ನಾಳ್ ಅವರಿಗೆ ನಿರಾಳವಾಗಿದ್ದು, ಶಾಸಕ ಸ್ಥಾನವೂ ಭದ್ರವಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಮುಖಭಂಗವಾಗಿದೆ. ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯುವ ಮೂಲಕ ಯತ್ನಾಳ್ ಅವರ ಶಾಸಕ ಸ್ಥಾನವನ್ನು ಭದ್ರಗೊಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತ್ನಾಳ್ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಅಬ್ದುಲ್ ಹಮೀದ್ ಮುಶ್ರೀಫ್ ಅವರು ಚುನಾವಣಾ ಅರ್ಜಿಯನ್ನು ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕಲಬುರಗಿ ಹೈಕೋರ್ಟ್ ಪೀಠವು, ಕಳೆದ 2025ರ ಜುಲೈ 18 ರಂದು ಹಮೀದ್ ಮುಶ್ರೀಫ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ, ಅರ್ಜಿದಾರರಿಗೆ ದಂಡವನ್ನೂ ವಿಧಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಶ್ರೀಫ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈಗ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಮುಶ್ರೀಫ್ ಅವರ ಅರ್ಜಿಯನ್ನು ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ಸತ್ಯಮೇವ ಜಯತೆ”. ನಾನು ಇಂತಹ ಗೊಡ್ಡು ಬೆದರಿಕೆಗಳಿಗೆ ಅಥವಾ ಸುಳ್ಳು ಕೇಸುಗಳಿಗೆ ಹೆದರುವವನಲ್ಲ, ಎಂದಿದ್ದಾರೆ. ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಮತ್ತು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

