ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಭಾಅಗದಲ್ಲಿ ಕಾಡಾನೆ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಡಾನೆ ದಾಳಿಗೆ ಕೂಲಿ ಕಾರ್ಮಿಕರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಹುಣಸೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಆನೆ ದಾಳಿಗೆ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
50 ವರ್ಷದ ಯಲ್ಲಪ್ಪ ಆನೆ ದಾಳಿಗೆ ಬಲಿಯಾದ ಕಾರ್ಮಿಕ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿರುವಳ್ಳಿ ಗ್ರಾಮದ ಯಲ್ಲಪ್ಪ, ಚಿಕ್ಕಮಗಳೂರಿನ ಹುಣಸೆಹಳ್ಳಿ ಗ್ರಾಮದಲ್ಲಿ ಕಾಫಿ ತೋಟದ ಕೆಲಸಕ್ಕೆ ಬಂದಿದ್ದರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಕಾಡಾನೆ ದಾಳಿ ನಡೆಸಿದ್ದು, ಯಲ್ಲಪ್ಪ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಅರಣ್ಯ ವ್ಯಪ್ತಿಯ ಸುತ್ತಮುತ್ತ ಕಳೆದ ಒಂದು ವಾರದಿಂದ ಕಾಡಾನೆಗಳು ನಿರಂತರವಾಗಿ ಓಡಾಡುತ್ತಿವೆ. ಗ್ರಾಮಸ್ಥರು ಓಡಾಡಲು ಭಯಪಡುತ್ತಿದ್ದು, ಕಾಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನಗಳ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ಸುಮಾರು ಶೇ.60 ರಷ್ಟು ಸಾವುಗಳು ಮಾನವ-ವನ್ಯಜೀವಿ ಸಂಘರ್ಷಣೆಯಿಂದಲೇ ಸಂಭವಿಸಿವೆ. ಕಳೆದ 5 ವರ್ಷಗಳಲ್ಲಿ ಕರ್ನಾಟಕದಲ್ಲಿ ಸುಮಾರು 170 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

