ಬಂಗಾರಪೇಟೆ (ಕೋಲಾರ): ಪಟ್ಟಣದ ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮೂವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ದಂಧೆಯ ಕಿಂಗ್ಪಿನ್ ಗೀತಾ ಹಾಗೂ ಮೂವರು ಪುರುಷರನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆಯ ಜನವಸತಿ ಪ್ರದೇಶದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು, ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಬಂಧಿತ ಕಿಂಗ್ಪಿನ್ ಗೀತಾ ಎಂಬಾಕೆ ದಲ್ಲಾಳಿಗಳ ಮೂಲಕ ಗ್ರಾಹಕರನ್ನು ಅಡ್ಡೆಗೆ ಕರೆಸುತ್ತಿದ್ದಳು ಎನ್ನಲಾಗಿದೆ. ಕೇವಲ 200 ರೂಪಾಯಿಗಳ ಕಮಿಷನ್ ದಂಧೆಗಾಗಿ ಈ ಅಕ್ರಮ ಚಟುವಟಿಕೆಯನ್ನು ನಡೆಸಲಾಗುತ್ತಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಡತನದ ಲಾಭ ಪಡೆದು ಮಹಿಳೆಯರನ್ನು ಈ ದಂಧೆಗೆ ದೂಡಲಾಗುತ್ತಿತ್ತು ಎನ್ನಲಾಗಿದೆ.
ಕಿಂಗ್ಪಿನ್ ಗೀತಾ ಮತ್ತು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ದಂಧೆಯಲ್ಲಿ ಸಿಲುಕಿದ್ದ ಮೂವರು ಮಹಿಳೆಯರನ್ನು ಪೊಲೀಸರು ಸುರಕ್ಷಿತವಾಗಿ ರಕ್ಷಿಸಿ, ಸಾಂತ್ವನ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ.ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ದಂಧೆಯ ಹಿಂದೆ ಇನ್ನು ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

