ಎಸ್ಎಸ್ಎಲ್ಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 18ರಿಂದ ಏಪ್ರಿಲ್ 2ರ ತನಕ ಪರೀಕ್ಷೆಗಳು ನಡೆಯಲಿದ್ದು, ಶಾಲೆಗಳಲ್ಲಿ ತಯಾರಿ ಶುರುವಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಉತ್ತಮವಾಗಿ ಬರಲು ಜಿಲ್ಲಾಡಳಿತ ಕ್ರಮಗಳನ್ನು ಕೈಗೊಂಡಿದೆ.
ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗುವ ಹಿನ್ನಲೆಯಲ್ಲಿ ಗುರುವಾರ ಕೊರಟಗೆರೆ ತಾಲೂಕು ಮತ್ತು ಮಧುಗಿರಿ ತಾಲೂಕಿಗೆ ಭೇಟಿ ನೀಡಿದರು.
ಸರ್ಕಾರಿ ಪ್ರೌಢಶಾಲೆ ಕೊರಟಗೆರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಉತ್ತಮ ರೀತಿಯಲ್ಲಿ ಬರೆಯುವಂತೆ ಆತ್ಮಸ್ಥೈರ್ಯವನ್ನು ತುಂಬಿದರು.
ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಗತಿಯನ್ನು ತೆಗೆದುಕೊಂಡು ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಕ್ರಮವಹಿಸಲು ಸಂಬಂಧಪಟ್ಟ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಬಳಿಕ ಕೊರಟಗೆರೆ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳು ಆಹಾರದ ಗುಣಮಟ್ಟ ಮತ್ತು ವಸತಿ ನಿಲಯದ ಪರಿಸರವನ್ನು ವೀಕ್ಷಿಸಿದರು.
ವಸತಿ ನಿಲಯವನ್ನು ಉತ್ತಮವಾಗಿ ನಿರ್ವಹಿಸಿರುವುದು ಕಂಡು ಬಂದಿದ್ದು ವಸತಿ ನಿಲಯದ ಮೇಲ್ವಿಚಾರಕರನ್ನು ಅಭಿನಂದಿಸಿ ಇನ್ನು ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆಯನ್ನು ಕೊಟ್ಟರು.
ಬಳಿಕ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೊರಟಗೆರೆ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಒಳಾಂಗಣ ಶಟಲ್ ಬ್ಯಾಡ್ಮಿಂಟನ್ ಕೋರ್ಟ್ಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರದಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮುಂಬರುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮವಾಗಿ ಅಂಕಗಳನ್ನು ಗಳಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸುವಂತೆ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯವನ್ನು ತುಂಬಿದರು.
ಬಳಿಕ ಮಧುಗಿರಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಅನುತ್ತೀರ್ಣ ಆದಂತಹ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಗತಿ ನಡೆಸಿ ಉತ್ತೀರ್ಣರಾಗುವಂತೆ ಮಾಡಲು ಸಂಬಂದಿಸಿದ ಶಿಕ್ಷಕರಿಗೆ ಸೂಚಿಸಿದರು.

