ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮುಸ್ಲಿಂ ಯುವಕರು ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.
ಮುಸ್ಲಿಂ ಯುವತಿಯೊಂದಿಗೆ ಬೈಕ್ ನಲ್ಲಿ ಹೋಗುವಾಗ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ಘಟನೆ ನಡೆದಿದೆ. ಬಾಲಕನ ಮೇಲೆ ಹಲ್ಲೆ ಮಾಡಿದ ಎಂಟು ಯುವಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಾಲಕನ ಸಹೋದರ ನೀಡಿದ ದೂರಿನ ಅನ್ವಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎಸ್ಪಿ ಪ್ರತಿಕ್ರಿಯೆ:
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಮೇಲ್ನೋಟಕ್ಕೆ ನೈತಿಕ ಪೊಲೀಸ್ ಗಿರಿ ಎನ್ನುವುದು ಪತ್ತೆಯಾಗಿದೆ. ಬಾಲಕ ಹಾಗೂ ಬಾಲಕಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿ ಯುವಕರು ಬೆದರಿಕೆ ಹಾಕಿದ್ದಾರೆ. ಮನೆಗೂ ಹೋಗಿ ಹಲ್ಲೆಗೆ ಯತ್ನಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

