ಬೇಸಿಗೆ ವೇಳೆ ಕುಡಿಯುವ ನೀರು ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಸಿಗೆ ನಿರ್ವಹಣೆ ಸಂಬಂಧ ವಹಿಸಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ. ಡಿ.ಸಿ, ತಹಶೀಲ್ದಾರ್ಗಳು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಇಮ್ಯಾನುವಲ್ ಸಂತೋಷ್ ಮುಂತಾದವರು ಉಪಸ್ಥಿತರಿದ್ದರು.
ಸಭೆಯಲ್ಲಿ ನೀಡಿದ ಸೂಚನೆಗಳು
- ಬೇಸಿಗೆ ಸಂದರ್ಭದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.
- ಬೇಸಿಗೆ ವೇಳೆ ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ ಗ್ರಾಮಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಈಗಲೇ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಖಾಸಗಿ ಬೋರ್ ವೆಲ್, ಟ್ಯಾಂಕರ್ ಇನ್ನಿತರ ಮೂಲಕ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರು ಒದಗಿಸಬೇಕಿದೆ. ಕೊಳವೆಬಾವಿಗಳಲ್ಲಿ ಇನ್ನಷ್ಟು ನೀರು ಪಡೆಯಲು ಸಾಧ್ಯ ಇರುವ ಬಗ್ಗೆ ಪರಿಶೀಲಿಸಬೇಕು.
- ಜಾನುವಾರುಗಳಿಗೆ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕಿದೆ. ಜಾನುವಾರುಗಳಿಗೆ ನೀರು ಸಂಗ್ರಹಿಸುವ ಕಟ್ಟೆಗಳನ್ನು ಸ್ವಚ್ಚ ಪಡಿಸಿ ಕುಡಿಯುವ ನೀರು ತುಂಬಿಸಬೇಕು. ಮೇವಿನ ಲಭ್ಯತೆ ಸಾಕಷ್ಟು ಪ್ರಮಾಣದಲ್ಲಿ ಇರಬೇಕು. ಎಲ್ಲಿಯೂ ಮೇವಿಗೆ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಬೇಕು.
- ಪಟ್ಟಣ ಪ್ರದೇಶಗಳಲ್ಲಿಯೂ ಕುಡಿಯುವ ನೀರು ಸರಬರಾಜಿಗೆ ಯಾವುದೇ ತೊಂದರೆ ಇರದಂತೆ ಗಮನಹರಿಸಬೇಕು. ಲಭ್ಯವಿರುವ ನೀರಿನ ಮೂಲಗಳಿಂದ ಅಗತ್ಯಕ್ಕನುಗುಣವಾಗಿ ನೀರು ಸರಬರಾಜು ಮಾಡಬೇಕು. ಹಲವು ವಾರ್ಡ್ಗಳಿಂದ ನೀರಿನ ಸಮಸ್ಯೆ ಇರುವ ಬಗ್ಗೆ ಸಾರ್ವಜನಿಕರು ಗಮನಕ್ಕೆ ತರುತ್ತಿದ್ದಾರೆ. ಅಧಿಕಾರಿಗಳು ಭೇಟಿ ನೀಡಿ ಕೂಡಲೇ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು. ಪರ್ಯಾಯ ವ್ಯವಸ್ಥೆಗಳ ಮೂಲಕವು ನೀರು ಒದಗಿಸಬೇಕು.
- ನಗರ, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ದುರಸ್ತಿ ಅಗತ್ಯವಿದ್ದರೆ ಶೀಘ್ರ ಸರಿಪಡಿಸಿ ಉಪಯೋಗವಾಗುವಂತೆ ಚಾಲನೆಗೊಳಿಸಬೇಕು. ಸ್ವಚ್ಚತೆ ಕೆಲಸಗಳು ಪರಿಣಾಮಕಾರಿಯಾಗಿ ಆಗಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
- ತೋಟಗಾರಿಕೆ, ಕೃಷಿ ಬೆಳೆ ಚಟುವಟಿಕೆಗಳ ನಿರ್ವಹಣೆಗೆ ಯಾವುದೇ ಸಮಸ್ಯೆಯಾಗಬಾರದು. ಬೇಸಿಗೆ ವೇಳೆ ಕಾಡ್ಗಿಚ್ಚು, ಆಕಸ್ಮಿಕ ಬೆಂಕಿ ಅನಾಹುತಗಳು ಸಂಭವಿಸದಂತೆ ನಿರಂತರವಾಗಿ ನಿಗಾ ವಹಿಸಬೇಕು. ಅರಣ್ಯ ಇಲಾಖೆ, ಅಗ್ನಿಶಾಮಕ ಅಧಿಕಾರಿಗಳು ಕಟ್ಟೆಚ್ಚೆರದಿಂದ ಇರಬೇಕು.

