ಕೊಪ್ಪಳ : ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಮಗು ಹೆತ್ತ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೆರೆಯ ವಿಜಯನಗರ ಜಿಲ್ಲೆಯ 21 ವರ್ಷದ ಯುವಕ ಅಲ್ತಾಫ್ ಎಂಬಾತನ ವಿರುದ್ಧ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯೇ ಸೋದರಮಾವ: ಆರೋಪಿ ಅಲ್ತಾಫ್ ಸಂತ್ರಸ್ತ ಬಾಲಕಿಯ ಸೋದರಮಾವನಾಗಿದ್ದು, ಕುಟುಂಬದವರು ಇವರಿಬ್ಬರ ಮದುವೆಯನ್ನು ಅನೌಪಚಾರಿಕವಾಗಿ ನಿಶ್ಚಯಿಸಿದ್ದರು ಎಂದು ತಿಳಿದುಬಂದಿದೆ.
ಲೈಂಗಿಕ ದೌರ್ಜನ್ಯ: ಮದುವೆಯಾಗುವುದಾಗಿ ನಂಬಿಸಿ ಅಲ್ತಾಫ್ ಬಾಲಕಿಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಕಳೆದ ಅಕ್ಟೋಬರ್ ತಿಂಗಳಿನಿಂದ ಈ ಕೃತ್ಯ ನಡೆದಿದ್ದು, ಬಾಲಕಿ ಗರ್ಭಿಣಿಯಾಗಲು ಇದೇ ಕಾರಣ ಎನ್ನಲಾಗಿದೆ.ವಿಷಯವನ್ನು ಯಾರಿಗೂ ತಿಳಿಸದಂತೆ ಆರೋಪಿ ಬಾಲಕಿಗೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪೊಲೀಸ್ ಕ್ರಮ : ಘಟನೆಗೆ ಸಂಬಂಧಿಸಿದಂತೆ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಅಲ್ತಾಫ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತನಿಖೆ ಮುಂದುವರಿದಿದೆ.
ಸಚಿವರ ಆದೇಶ: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳಿಗೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

