ಬೆಂಗಳೂರು: ಸರ್ಕಾರದೊಂದಿಗೆ ನಡೆದ ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಮಾರ್ಚ್ 11ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ಕರ್ನಾಟಕ ಸರ್ಕಾರಿ ವೈದ್ಯರ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ ತೀರ್ಮಾನಿಸಿವೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಸೋಮವಾರ ವಿಕಾಸಸೌಧದಲ್ಲಿ ಎರಡು ಸಂಘಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ವಾಸ್ತವ ಸ್ಥಿತಿ ವಿವರಿಸಿದ್ದು ಮುಷ್ಕರ ನಡೆಸಿದಂತೆ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.
ಆದರೆ ತಮ್ಮ ಬೇಡಿಕೆಗಳ ಈಡೇರಿಕೆಗೆ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮನವಿ ಮಾಡಿದ್ದು, ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಯಾವುದೇ ಸ್ಪಷ್ಟ ಭರವಸೆ ಸಚಿವರು, ಅಧಿಕಾರಿಗಳಿಂದ ಸಿಗದ ಕಾರಣ ಅನಿವಾರ್ಯವಾಗಿ ಮುಷ್ಕರ ನಡೆಸಲು ತೀರ್ಮಾನಿಸಿದ್ದೇವೆ ಎಂದು ಸಂಘದ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

