“ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಕೈಗಾರಿಕಾ ವಸಾಹತುಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ” ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳು ಕೈಗಾರಿಕೆಗಳಿಂದ ತೆರಿಗೆ ವಸೂಲಿ ಮಾಡುತ್ತಿದ್ದು, ಈ ಪ್ರದೇಶದಲ್ಲಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕೈಗಾರಿಕೋದ್ಯಮಿಗಳು ನೀಡಿದ ದೂರಿಗೆ ಪ್ರತಿಕ್ರಿಯಿಸಿದರು.
“ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಕೈಗಾರಿಕಾ ವಸಾಹತುಗಳಲ್ಲಿ ನೀರು, ವಿದ್ಯುತ್, ರಸ್ತೆ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಇತರೇ ಅಗತ್ಯ ಕಾಮಗಾರಿಗಳನ್ನು ನಿರ್ವಹಿಸುವ ಕುರಿತು ತಮ್ಮ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಳ್ಳುವಂತೆ” ನಿರ್ದೇಶನ ನೀಡಿದರು.
ದಾಂಡೇಲಿ ಕೈಗಾರಿಕಾ ವಸಾಹತುವಿನಲ್ಲಿ ಹಂಚಿಕೆಯಾಗಿರುವ ನಿವೇಶನಗಳನ್ನು ನೋಂದಣಿ ಮಾಡುವ ಕುರಿತಂತೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶ ಮತ್ತು ಆಯುಕ್ತರು ನಗರಸಭೆ ದಾಂಡೇಲಿ ಜಂಟಿಯಾಗಿ ನಿಯಮಾನುಸಾರ ಪರಿಶೀಲಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸುವಂತೆ ತಿಳಿಸಿದರು.
ರಾಮನಗರ ಕೈಗಾರಿಕಾ ವಸಾಹತುಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲು ವಿದ್ಯುತ್ ಉಪ ಕೇಂದ್ರ ಸ್ಥಾಪಿಸುವ ಕುರಿತಂತೆ ತಹಸೀಲ್ದಾರ್ ಅವರಿಂದ ವರದಿ ಪಡೆದು, ಅರಣ್ಯ ಇಲಾಖೆಯ ಸೂಕ್ತ ಅನುಮತಿಯೊಂದಿಗೆ ವಿದ್ಯುತ್ ಕೇಂದ್ರ ಸ್ಥಾಪಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
ಸಿದ್ದಾಪುರದ ಮಳವಳ್ಳಿಯಲ್ಲಿ ನಿರ್ಮಿಸುತ್ತಿರುವ ನೂತನ ಕೈಗಾರಿಕ ವಸಾಹತು ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಮತ್ತು ಮುಡಗೇರಿಯಲ್ಲಿ ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಬಾಕಿ ಇರುವ ಪರಿಹಾರದ ಮೊತ್ತವನ್ನು ಶೀಘ್ರವಾಗಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ಕೊಟ್ಟರು.
ಹೊಸ ಕೈಗಾರಿಕೆಗಳ ಆರಂಭಕ್ಕೆ ಅನುಮತಿ ನೀಡುವ ಮುನ್ನ, ಈ ಕೈಗಾರಿಕೆಗಳಿಂದ ಸುತ್ತಮುತ್ತಲಿನ ಪರಿಸರ ಮತ್ತು ಜನಜೀವನಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂಬುದನ್ನು ಸಂಪೂರ್ಣ ಖಚಿತಪಡಿಸಿಕೊಂಡು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಗತ್ಯ ಅನುಮತಿಯ ವರದಿಯನ್ನು ಅಧಿಕಾರಿಗಳು ಪರಿಶೀಲಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ರಫ್ತು ಉತ್ತೇಜನಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ, ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯ ಪ್ರಗತಿ ಬಗ್ಗೆ, ಪಿಎಂ ವಿಶ್ವಕರ್ಮ ಯೋಜನೆಯ ಪ್ರಗತಿ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

