ಚಿತ್ರದುರ್ಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಆಗುತ್ತಿರುವ ಅನ್ಯಾಯ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪಾದಯಾತ್ರೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.
ಚಿತ್ರದುರ್ಗದ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ, ಬೃಹತ್ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮಾರ್ಚ್ 22 ರಂದು ಚಿತ್ರದುರ್ಗದಿಂದ ಪಾದಯಾತ್ರೆ ನಡೆಸಲಿದ್ದು, ಮಾ. 27ರಂದು ಬೆಂಗಳೂರು ತಲುಪಲಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಪಿ. ರಾಜೀವ್ ತಿಳಿಸಿದ್ದಾರೆ.
ಮೊದಲ ದಿನ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಎಸ್ಸಿ, ಎಸ್ಟಿ ಸಮುದಾಯಗಳಿಗೆ ನ್ಯಾಯ ಒದಗಿಸುವುದಾಗಿ ಸರ್ಕಾರದ ಪ್ರತಿನಿಧಿಗಳು ಭರವಸೆ ನೀಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು. ಬೆಂಗಳೂರು ತಲುಪಿದ ನಂತರ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಹೇಳಿದ್ದಾರೆ.
ಮಾಜಿ ಸಚಿವರಾದ ಬಿ. ಶ್ರೀರಾಮುಲು, ಶಿವನಗೌಡ ನಾಯಕ, ರಾಜುಗೌಡ ಮಾತನಾಡಿದರು. ಸಂಸದ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಶಾಸಕ ಎಂ. ಚಂದ್ರಪ್ಪ, ಮಾಜಿ ಸಚಿವ ಎನ್. ಮಹೇಶ್ ಇದ್ದರು.

