ಅಹಮದಾಬಾದ್ : 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಜಯ ಸಾಧಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 131 ಕೋಟಿ ರೂಪಾಯಿಗಳ ಬೃಹತ್ ನಗದು ಬಹುಮಾನವನ್ನು ಘೋಷಿಸಿದೆ.
ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಭಾರತ, ಸತತ ಎರಡನೇ ಬಾರಿಗೆ ಟ್ರೋಫಿ ಉಳಿಸಿಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಿದೆ.
ಮೂರನೇ ಬಾರಿ ವಿಶ್ವ ಚಾಂಪಿಯನ್: ಈ ಗೆಲುವಿನೊಂದಿಗೆ ಭಾರತವು ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂರು ಬಾರಿ ಪ್ರಶಸ್ತಿ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಹೆಚ್ಚಿದ ಬಹುಮಾನ ಮೊತ್ತ: 2024ರ ವಿಶ್ವಕಪ್ ಗೆಲುವಿಗೆ ನೀಡಿದ್ದ ಬಹುಮಾನಕ್ಕಿಂತ ಈ ಬಾರಿ 6 ಕೋಟಿ ರೂ. ಹೆಚ್ಚುವರಿಯಾಗಿ ನೀಡಲಾಗಿದೆ.ತವರು ನೆಲದಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ದಾಖಲೆಯನ್ನೂ ಭಾರತ ತನ್ನದಾಗಿಸಿಕೊಂಡಿದೆ.
ವಿಶ್ವಕಪ್ ಹಾದಿ
ಭಾರತ ತಂಡವು ಗ್ರೂಪ್ ಹಂತದ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಫೇವರೆಟ್ ಆಗಿ ಹೊರಹೊಮ್ಮಿತ್ತು. ಸೂಪರ್ 8 ಹಂತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತರೂ, ಜಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತು. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು.ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸರ್ವಾಂಗೀಣ ಪ್ರದರ್ಶನ ನೀಡಿದ ಭಾರತ, 96 ರನ್‌ಗಳ ಬೃಹತ್ ಅಂತರದಿಂದ ಜಯಗಳಿಸಿ ವಿಶ್ವದ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
“ಈ ಐತಿಹಾಸಿಕ ಸಾಧನೆ ಮಾಡಿದ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಆಯ್ಕೆದಾರರಿಗೆ ಮಂಡಳಿಯು ಅಭಿನಂದನೆ ಸಲ್ಲಿಸುತ್ತದೆ” ಎಂದು ಬಿಸಿಸಿಐ ಮಂಗಳವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

