ಬೆಂಗಳೂರು: ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಬಳಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕೃತಿಕಾ (21 ) ಎಂದು ಗುರುತಿಸಲಾಗಿದೆ .ಈಕೆ ಆರ್.ಆರ್ (RR) ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಅಪಘಾತ ಸಂಭವಿಸಿದ್ದು ಹೇಗೆ? : ಸಂಜೆ ಕಾಲೇಜು ಮುಗಿಸಿಕೊಂಡು ಕೃತಿಕಾ ತನ್ನ ಬೈಕ್ನಲ್ಲಿ ತೆರಳುತ್ತಿದ್ದಳು. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೃತಿಕಾ ರಸ್ತೆಗೆ ಬಿದ್ದಿದ್ದಾರೆ. ದುರದೃಷ್ಟವಶಾತ್, ಟಿಪ್ಪರ್ ಸ್ಕೂಟಿಯಿಂದ ಬಿದ್ದವರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮ ಕೃತಿಕಾ (21 ) ಸ್ಥಳದಲ್ಲೇ ಮೃತಪಟ್ಟರೆ, ಬೈಕ್ ನಲ್ಲಿದ್ದ ಹಂಸ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

