ಬೆಂಗಳೂರು: ಮಂಡ್ಯದ ಮೈ ಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನಿಸಲಾಗಿದೆ.
ಮೈ ಶುಗರ್ ಕಾರ್ಖಾನೆಯಲ್ಲಿ 5000 TCD ಕಬ್ಬುನುರಿಯುವ ಹೊಸ ಯಂತ್ರೋಪಕರಣ ಅಳವಡಿಸಲಾಗುವುದು. 60 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ.
ಅದೇ ರೀತಿ ಕೆ.ಹೆಚ್.ಬಿ. ಸೂರ್ಯಸಿಟಿ ಕ್ರೀಡಾಂಗಣ ನಿರ್ಮಾಣಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ. 813 ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸೂರ್ಯ ನಗರದಲ್ಲಿ 75 ಎಕರೆ ಜಮೀನಿನಲ್ಲಿ ಕ್ರೀಡಾಂಗಣ ನಿರ್ಮಿಸಲಾಗುವುದು. ಕ್ರೀಡಾಂಗಣದ ಸುತ್ತ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇತರೆ ಕಟ್ಟಡ ಕಾಮಗಾರಿ ಪರಿಷ್ಕೃತ ವೆಚ್ಚದ ಮಾಹಿತಿ ನೀಡಲು ಸೂಚಿಸಲಾಗಿದೆ.

