ದಾವಣಗೆರೆ: ರಾಜ್ಯದ ಗಮನ ಸೆಳೆದ ದಾವಣಗೆರೆ ದಕ್ಷಿಣ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 23 ಮಂದಿ ಮುಸ್ಲಿಂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ರಾಷ್ಟ್ರೀಯ ಪಕ್ಷಗಳ ಹೆಸರಲ್ಲಿ ನಾಮಪತ್ರ ಸಲ್ಲಿಸಿ ಬಿ ಫಾರಂ ನೀಡದ ಕಾರಣ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಅವರು ಸಲ್ಲಿಸಿದ ನಾಮಪತ್ರ ಸ್ವೀಕರಿಸಲಾಗಿದೆ. ಕ್ಷೇತ್ರದಲ್ಲಿ 45 ನಾಮಪತ್ರ ಸಲ್ಲಿಕೆಯಾಗಿದ್ದು, ಮೂವರ ನಾಮಪತ್ರ ತಿರಸ್ಕೃತಗೊಂಡಿವೆ. 42 ನಾಮಪತ್ರಗಳು ಮಾನ್ಯವಾಗಿವೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು ನಿರ್ಣಾಯಕರಾಗಿದ್ದು 64,246 ಮುಸ್ಲಿಂ ಸಮುದಾಯದ ಮತದಾರರಿದ್ದಾರೆ. 39 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. 23 ಮಂದಿ ಮುಸ್ಲಿಂ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಪ್ರಮುಖರಾಗಿದ್ದಾರೆ. ಎಸ್‌ಡಿಪಿಐನಿಂದ ಇಬ್ಬರು ನಾಮಪತ್ರ ಸಲ್ಲಿಸಿದ್ದು, ಒಬ್ಬರು ನಾಮಪತ್ರ ವಾಪಸ್ ಪಡೆಯಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 26 ಕೊನೆಯ ದಿನವಾಗಿದೆ.
ಕಾಂಗ್ರೆಸ್ ನಿಂದ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡಿರುವ ಮುಸ್ಲಿಂ ಸಮುದಾಯದ ಯುವಕರು, ಮುಖಂಡರು ಸಮುದಾಯದ ಅಭ್ಯರ್ಥಿಗಳಿಗೆ ಮತ ಚಲಾಯಿಸಿದಲ್ಲಿ ಕಾಂಗ್ರೆಸ್ ಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. 23 ಮಂದಿ ಅಭ್ಯರ್ಥಿಗಳು ಕಣದಲ್ಲಿ ಉಳಿದು ಮತಗಳ ಹಂಚಿಕೆ ಆದರೆ ಫಲಿತಾಂಶ ಬದಲಾವಣೆಯಾಗುವ ಸಾಧ್ಯತೆ ಇದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ನಿರಂತರವಾಗಿ ಜಯಗಳಿಸಿದೆ. ಈಗ 23 ಮಂದಿ ಮುಸ್ಲಿಂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅಲ್ಪಸಂಖ್ಯಾತ ಸಮುದಾಯ ಮತಗಳು ಚದುರಿ ಹೋಗದಂತೆ ಅಭ್ಯರ್ಥಿಗಳ ಮನವೊಲಿಸಿ ನಾಮಪತ್ರ ವಾಪಸ್ ತೆಗೆಸಲು ನಾಯಕರು, ಸಚಿವರು ತಂತ್ರಗಾರಿಕೆ ನಡೆಸಿದ್ದಾರೆ.

