ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಆಲಿಕಲ್ಲು ಮಳೆ ಏಪ್ರಿಲ್ 1ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಾರ್ಚ್ 26 ರಿಂದ ಏಪ್ರಿಲ್ 1ರವರೆಗೆ ಆಲಿಕಲ್ಲು ಮಳೆ ಆಗಲಿದೆ. ಧಾರವಾಡ, ಬೆಳಗಾವಿ, ಹಾವೇರಿ, ಗದಗ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಮಾರ್ಚ್ 26ರಂದು ಬಿರುಗಾಳಿ, ಗುಡುಗು, ಮಿಂಚು ಹೆಚ್ಚಾಗಿ ಕಾಣಿಸಿಕೊಳ್ಳುವ ಸಂಭವ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ರೈತರು, ಕುರಿಗಾಹಿಗಳು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ. ಮಾರ್ಚ್ 29 ರವರೆಗೆ ಈ ಮೇಲಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಅದೇ ರೀತಿ ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ದಾವಣಗೆರೆ, ಚಿತ್ರದುರ್ಗ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.

