ಬೆಂಗಳೂರು/ಚಿತ್ತೂರು : ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಬೆಂಗಳೂರಿನಿಂದ ಹೊರಟಿದ್ದ ಒಂದೇ ಕುಟುಂಬದ ಮೂವರು ಆಂಧ್ರಪ್ರದೇಶದ ಬಂಗಾರುಪಾಳ್ಯಂ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ಮೂಲದ ದಂಪತಿ ಮತ್ತು ಅವರ 4 ವರ್ಷದ ಹೆಣ್ಣು ಮಗು ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಿದ್ದರು. ಅದರಂತೆ ಬೆಳ್ಳಂಬೆಳಿಗ್ಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ರಸ್ತೆಯ ಬದಿಯಲ್ಲಿ ನಿಂತಿದ್ದ ಬಸ್ಗೆ ಇವರು ಪ್ರಯಾಣಿಸುತ್ತಿದ್ದ ಕಾರು ಹಿಂಬದಿಯಿಂದ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ.
ದುರಂತದ ಭೀಕರತೆ: ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಹಿಂಭಾಗದ ಅಡಿಗೆ ನುಗ್ಗಿದ್ದು, ದಂಪತಿ ಹಾಗೂ ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಪೊಲೀಸರು ಜೆಸಿಬಿ ಸಹಾಯದಿಂದ ಹೊರತೆಗೆದಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತಕ್ಕೆ ಕಾರಣ: ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕನ ಅತಿ ವೇಗವೇ ಈ ಅವಘಡಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

