ಬೆಂಗಳೂರು : ನಗರದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸಿದರೆ ರಾಜ್ಯಕ್ಕೆ ಅಪಕೀರ್ತಿ ಬರುತ್ತದೆ ಮತ್ತು ಕ್ರೀಡಾಭಿಮಾನಿಗಳಿಗೆ ನಿರಾಸೆಯಾಗುತ್ತದೆ. ಈ ಕಾರಣದಿಂದಲೇ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಲಾಗಿದೆ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಶನಿವಾರ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ವರ್ಷದ ಅಹಿತಕರ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸಿದರೆ ರಾಜ್ಯಕ್ಕೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಅಲ್ಲದೆ ಯುವಕರಿಗೆ ನಿರಾಸೆ ಮಾಡಬಾರದು ಎಂಬ ಕಾರಣಕ್ಕೆ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ.ಕಳೆದ ವರ್ಷ ಆರ್‌ಸಿಬಿ ಕಪ್ ಗೆದ್ದಾಗ ನಡೆದ ಅಹಿತಕರ ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದರು. ಅಂತಹ ಘಟನೆಗಳು ಮರುಕಳಿಸದಂತೆ ಈ ಬಾರಿ ಸ್ಟೇಡಿಯಂ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.
ಕ್ರೀಡಾಂಗಣದಲ್ಲಿ ಸಿಸಿಟಿವಿ ಕ್ಯಾಮೆರಾಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಮತ್ತು ತುರ್ತು ಸಂದರ್ಭದಲ್ಲಿ ಜನರು ಸುಲಭವಾಗಿ ಹೊರಹೋಗಲು ಗೇಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.ರಸ್ತೆಯಲ್ಲಿ ಅಕ್ರಮವಾಗಿ ಟಿಕೆಟ್ ಮಾರಾಟ ಮಾಡುವುದು ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ ಎಂದರು.ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪಂದ್ಯಗಳು ಶಾಂತಿಯುತವಾಗಿ ನಡೆಯಲಿವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

