ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಗೆ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ಮಾನ್ಯ ಮಾಡಿದ್ದು, ಏಪ್ರಿಲ್ 10 ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.
ಮೂರು ತಿಂಗಳ ಹಿಂದೆಯೇ ಆರೋಪಿ ಮೊಹಮ್ಮದ್ ಶಾರೀಕ್ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಇದೀಗ ನ್ಯಾಯಾಲಯ ಅರ್ಜಿಯನ್ನು ಪುರಸ್ಕರಿಸಿದೆ. ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ತನಿಖೆ ನಡೆಸಿ 2024ರಲ್ಲಿ ಆರೋಪಿಗಳಾದ ಶಾರೀಕ್ ಮತ್ತು ಸೈಯದ್ ಯಾಸಿನ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆಯ ಸಂದರ್ಭದಲ್ಲಿ ಆರೋಪಿ ಶಾರೀಕ್ ತಾನು ನಿರಾಪರಾಧಿ ಯಾವುದೇ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ವಾದಿಸಿದ್ದ. ಆದರೆ ಕಳೆದ ಡಿಸೆಂಬರ್ ನಲ್ಲಿ ತನ್ನ ವಕೀಲರ ಮೂಲಕ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದ. ನಂತರ ನ್ಯಾಯಾಲಯ ಮೂರು ತಿಂಗಳ ಕಾಲ ವಿಚಾರಣೆ ನಡೆಸಿದ್ದು ನ್ಯಾಯಾಲಯದಲ್ಲಿಯೂ ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅರ್ಜಿಯನ್ನು ಮಾನ್ಯ ಮಾಡಿದೆ. ಏ. 10 ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ ಎನ್ನಲಾಗಿದೆ.
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022 ರ ನವೆಂಬರ್ 19 ರಂದು ಸಂಜೆ 4:40 ಸುಮಾರಿಗೆ ಶಾರೀಕ್ ಆಟೋದಲ್ಲಿ ತೆರಳುವಾಗ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು.

