ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವ ನಡುವೆಯೇ, ಇಂದು ಬೆಳಿಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ಹೊರಡಬೇಕಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ವಿಮಾನದ ಒಳಗಿದ್ದ ಟಿಶ್ಯೂ ಪೇಪರ್ ಒಂದರಲ್ಲಿ “ಬಾಂಬ್ ಇದೆ” ಎಂದು ಕಿಡಿಗೇಡಿಗಳು ಬರೆದಿದ್ದರು.ಈ ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಭದ್ರತಾ ಸಿಬ್ಬಂದಿ, ವಿಮಾನದಲ್ಲಿದ್ದ ಎಲ್ಲಾ 183 ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಿದರು.
ಹುಸಿ ಬೆದರಿಕೆ: ವಿಮಾನ ಮತ್ತು ಪ್ರಯಾಣಿಕರ ಬ್ಯಾಗ್ಗಳನ್ನು ಕೂಲಂಕಷವಾಗಿ ತಪಾಸಣೆ ಮಾಡಿದ ನಂತರ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಖಚಿತವಾಗಿದೆ. ಇದರಿಂದಾಗಿ ಅಧಿಕಾರಿಗಳು ಮತ್ತು ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಮೈಸೂರಿನಲ್ಲಿ ಇಂತಹದ್ದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈ ಹಿಂದೆ ಓರ್ವನನ್ನು ಬಂಧಿಸಿದ್ದರು. ಸದ್ಯ ಈ ಘಟನೆಯ ಬಗ್ಗೆಯೂ ತನಿಖೆ ಮುಂದುವರಿದಿದೆ.

