ಮಂಡ್ಯ: ಪ್ರಥಮ ದರ್ಜೆ ಕಾಂಟ್ರಾಕ್ಟರ್ ಒಬ್ಬರ ಶವ ಕಾಅವೇರಿ ನದಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವ ಕಾಂತ್ರಾಕ್ಟರ್ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಗಿದೆ.
ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಾಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ ಬರುವುದಿಲ್ಲ ಎಂದು ಕುಟುಂಬಕ್ಕೆ ತಿಳಿಸಿ ಹೊರಟಿದ್ದ. ಆದರೆ ನಂತರ ಆತ ಮನೆಗೆ ವಾಪಸ್ ಆಗಿಲ್ಲ. ಆತನ ಮೊಬೈಲ್ ಸ್ವಿಚ್ ಆಫ್ ಆಗಿರುವುದರ ಜೊತೆಗೆ ಸಾಮಾಜಿಕ ಜಾಲತಾಣ ಖಾತೆಗಳೂ ಡಿ-ಆಕ್ಟಿವ್ ಆಗಿದ್ದವು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.
ಇದೀಗ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ನದಿಯಲ್ಲಿ ಪವನ್ ಅವರ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗಾಯಗಳಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಇದು ಕೊಲೆ ಆಗಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಪವನ್ ಸಾವಿನ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

