ಬಳ್ಳಾರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಸುದ್ದಿ ಆತಂಕ ಸೃಷ್ಟಿಸಿದೆಯಾದರೂ, ಸಮಯಪ್ರಜ್ಞೆಯಿಂದಾಗಿ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಬಳ್ಳಾರಿಯಿಂದ ಬೆಂಗಳೂರಿಗೆ ಹೊರಟಿದ್ದ ಹಂಪಿ ಎಕ್ಸ್‌ಪ್ರೆಸ್ (Hampi Express) ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರೈಲು ಚಲಿಸುತ್ತಿದ್ದ ವೇಳೆಯೇ ಬೋಗಿಯೊಂದರಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ರೈಲು ಸಿಬ್ಬಂದಿ ಮತ್ತು ಪ್ರಯಾಣಿಕರು ಎಚ್ಚೆತ್ತುಕೊಂಡಿದ್ದು, ತಕ್ಷಣವೇ ರೈಲನ್ನು ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ. ಇದರಿಂದಾಗಿ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಮಟ್ಟದ ಆಸ್ತಿ ಹಾನಿ ಸಂಭವಿಸಿಲ್ಲ.
ಪ್ರಾಥಮಿಕ ವರದಿಗಳ ಪ್ರಕಾರ, ಬೋಗಿಯ ಚಕ್ರಗಳ ಕೆಳಗೆ ತಾಂತ್ರಿಕ ದೋಷ ಅಥವಾ ‘ಬ್ರೇಕ್ ಬೈಂಡಿಂಗ್’ (Break Binding) ನಿಂದಾಗಿ ಘರ್ಷಣೆ ಉಂಟಾಗಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.ರೈಲ್ವೆ ತಾಂತ್ರಿಕ ತಂಡವು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ. ಬೆಂಕಿ ನಂದಿಸಿದ ಬಳಿಕ ರೈಲು ಮತ್ತೆ ಬೆಂಗಳೂರಿನತ್ತ ಪ್ರಯಾಣ ಮುಂದುವರಿಸಿದೆ ಎಂದು ತಿಳಿದುಬಂದಿದೆ.

