ಧಾರವಾಡ : ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮತ್ತು ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 15ಕ್ಕೆ ಮುಂದೂಡಿದೆ.
ಈ ಹಿಂದೆ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಏಪ್ರಿಲ್ 9ರಂದು (ಇಂದು) ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ, ಇಂದು ನ್ಯಾಯಾಧೀಶರು ಅವರು ಕೆಲವು ತಾಂತ್ರಿಕ ಕಾರಣಗಳಿಂದಾಗಿ ತೀರ್ಪನ್ನು ಏಪ್ರಿಲ್ 15ಕ್ಕೆ ಪ್ರಕಟಿಸುವುದಾಗಿ ಘೋಷಿಸಿದರು.
ಹೌದು. ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತನ್ನ ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ.ನ್ಯಾಯಾಲಯವು ಇಂದು ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿ, ಅಂತಿಮ ತೀರ್ಪನ್ನು ಏಪ್ರಿಲ್ 15 ರಂದು ಪ್ರಕಟಿಸುವುದಾಗಿ ತಿಳಿಸಿದೆ.
ಘಟನೆ ಹಿನ್ನೆಲೆ : 2016ರ ಜೂನ್ 15ರಂದು ಧಾರವಾಡದ ಜಿಮ್‌ನಲ್ಲಿ ಯೋಗೀಶ್ ಗೌಡ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.ಈ ಹೈಪ್ರೊಫೈಲ್ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು 15ನೇ ಆರೋಪಿಯಾಗಿದ್ದಾರೆ (A-15). ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಸಿಬಿಐ (CBI) ಆರೋಪಿಸಿದೆ.
ತನಿಖೆ: ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರು. ನಂತರ 2019ರಲ್ಲಿ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿತ್ತು. ಸಿಬಿಐ ಈಗಾಗಲೇ ಹಲವು ಮಹತ್ವದ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.ಈ ಕೊಲೆ ಪ್ರಕರಣವು ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು. ಈಗ ಎಲ್ಲರ ಗಮನ ಏಪ್ರಿಲ್ 15ರಂದು ಹೊರಬರಲಿರುವ ನ್ಯಾಯಾಲಯದ ತೀರ್ಪಿನತ್ತ ನೆಟ್ಟಿದೆ.

